Kalaburagi | ಶೋಷಿತ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಲು ಆಗ್ರಹ

ಕಲಬುರಗಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಆತಂಕ ವ್ಯಕ್ತಪಡಿಸಿರುವ ಅಖಿಲ ಕರ್ನಾಟಕ ದಲಿತ ಸೇನೆಯ ರಾಜ್ಯಾಧ್ಯಕ್ಷ ದತ್ತಾತ್ರೇಯ ಕುಡಕಿ, ಶೋಷಿತ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತದ ಸಂವಿಧಾನವು ಶೋಷಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ, ಸಮಾನ ಅವಕಾಶ ಮತ್ತು ಸೂಕ್ತ ಪ್ರಾತಿನಿಧ್ಯ ಒದಗಿಸುವ ಆಶಯವನ್ನು ಹೊಂದಿದೆ. ಇಂತಹ ಸಂದರ್ಭದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾನೂನನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನಿಂದ ಶೋಷಿತ ಸಮುದಾಯಗಳ ಶಿಕ್ಷಣ, ಉದ್ಯೋಗ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಪ್ರಾತಿನಿಧ್ಯದ ಮೇಲೆ ಪರಿಣಾಮ ಉಂಟಾಗುವ ಆತಂಕವಿದೆ ಎಂದು ತಿಳಿಸಿದ್ದಾರೆ.
ಶತಮಾನಗಳಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆಯನ್ನು ಎದುರಿಸುತ್ತಿರುವ ಸಮುದಾಯಗಳಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಹೀಗಾಗಿ, ಶೋಷಿತ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಸಂವಿಧಾನಾತ್ಮಕ ಹಾಗೂ ಕಾನೂನುಬದ್ಧ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸಿದ್ದಾರೆ.
ತಮಿಳುನಾಡಿನಲ್ಲಿ ಶೇ. 69ರಷ್ಟು ಮೀಸಲಾತಿ ಜಾರಿಯಲ್ಲಿರುವುದನ್ನು ಉಲ್ಲೇಖಿಸಿದ ದತ್ತಾತ್ರೇಯ ಕುಡಕಿ, ಅಲ್ಲಿನ ಮೀಸಲಾತಿ ಸಂಬಂಧಿತ ಕಾನೂನನ್ನು ಸಂವಿಧಾನದ ಒಂಬತ್ತನೇ ಅನುಸೂಚಿಯಲ್ಲಿ ಸೇರಿಸಿರುವ ಮಾದರಿಯನ್ನು ಕರ್ನಾಟಕ ಸರ್ಕಾರ ಅಧ್ಯಯನ ಮಾಡಬೇಕು ಎಂದು ಹೇಳಿದ್ದಾರೆ.






