Kalaburagi | ಪ್ರಿಯಾಂಕ್ ಖರ್ಗೆಗೆ ಡಿಸಿಎಂ, ಅಲ್ಲಮಪ್ರಭು ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಕಲಬುರಗಿ: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಮಾಜಿಕ ನ್ಯಾಯ, ಜನಪರ ಆಡಳಿತ ಮತ್ತು ಪ್ರಾಮಾಣಿಕ ರಾಜಕಾರಣದ ಮೂಲಕ ಗುರುತಿಸಿಕೊಂಡಿರುವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಇತರೆ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಪಿಡ್ಡಪ್ಪ ಜಾಲಗಾರ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರು ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ರಾಜ್ಯದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ನ್ಯಾಯ, ಯುವಜನರ ಸಬಲೀಕರಣ ಹಾಗೂ ಆಡಳಿತಾತ್ಮಕ ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡಿರುವ ಅವರು ರಾಜ್ಯದ ಪ್ರಮುಖ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದರು.
ಖರ್ಗೆ ಕುಟುಂಬವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ರಾಷ್ಟ್ರಮಟ್ಟ ಹಾಗೂ ರಾಜ್ಯಮಟ್ಟದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದೆ. ಪಕ್ಷ ಸಂಘಟನೆ, ಜನಪರ ಹೋರಾಟಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಪರಿಣಾಮಕಾರಿ ಧ್ವನಿಯಾಗಿ ಕಾರ್ಯನಿರ್ವಹಿಸಿರುವ ಪ್ರಿಯಾಂಕ್ ಖರ್ಗೆ ಅವರ ಸೇವೆಯನ್ನು ಪರಿಗಣಿಸಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರನ್ನು ಸಚಿವರನ್ನಾಗಿ ನೇಮಿಸಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.






