Kalaburagi | ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಶಿಫಾರಸು ತಿರಸ್ಕರಿಸಲು ಆಗ್ರಹ

ಕಲಬುರಗಿ : ಕಾವೇರಿ ನೀರು ನಿರ್ವಹಣಾ ಸಮಿತಿಯು ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಶಿಫಾರಸ್ಸನ್ನು ತಕ್ಷಣವೇ ತಿರಸ್ಕರಿಸಿ, ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಕರುನಾಡ ವಿಜಯಸೇನೆ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷ ಪೃಥ್ವಿರಾಜ ಎಸ್. ರಾಂಪೂರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ರಾಜ್ಯದ ಹಲವು ಜಿಲ್ಲೆಗಳು ಈಗಾಗಲೇ ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಿದ್ದು, ಕೆ.ಆರ್.ಎಸ್. ಜಲಾಶಯದಲ್ಲಿ ನೀರಿನ ಸಂಗ್ರಹವೂ ಗಣನೀಯವಾಗಿ ಕುಸಿದಿದೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವಾಗ ತಮಿಳುನಾಡಿಗೆ ನೀರು ಬಿಡುವಂತೆ ಶಿಫಾರಸು ಮಾಡಿರುವುದು ಕರ್ನಾಟಕದ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ತಿಳಿಸಲಾಗಿದೆ.
ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದ್ದು, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಮಂಡ್ಯ ಸೇರಿದಂತೆ ಕಾವೇರಿ ಕಣಿವೆಯ ರೈತರು ನೀರಿನ ಕೊರತೆಯಿಂದ ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ತಕ್ಷಣವೇ ಮರುಪರಿಶೀಲನಾ ಅರ್ಜಿ ಸಲ್ಲಿಸಿ ಕಾನೂನು ಹೋರಾಟವನ್ನು ಸಮರ್ಥವಾಗಿ ನಡೆಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡಬಾರದು. ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ ರಾಜ್ಯದ ಪರವಾಗಿ ಧ್ವನಿ ಎತ್ತುವಂತೆ ಕರುನಾಡ ವಿಜಯಸೇನೆ ಸಂಸದರನ್ನು ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ನಾಗರಾಜ ಮ್ಯಾತ್ರಿ, ನಗರ ಅಧ್ಯಕ್ಷ ರಾಜು ಗುಂಟ್ರಾಳ, ತಾಲೂಕು ಅಧ್ಯಕ್ಷೆ ಕಲ್ಯಾಣಿ ತಳವಾರ್, ಉಪಾಧ್ಯಕ್ಷ ಪ್ರಭುಲಿಂಗ ಪೂಜಾರಿ, ಚಿಂಚೋಳಿ ತಾಲೂಕು ಯುವ ಘಟಕದ ಅಧ್ಯಕ್ಷ ಪವನ್ ಕಟ್ಟಿಮನಿ, ಶಿವಪ್ಪ ಹಾಗೂ ಸಂಘಟನೆಯ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.






