Kalaburagi | ಬುದ್ಧ, ಬಸವಣ್ಣ, ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ : ಕಠಿಣ ಕಾನೂನು ಕ್ರಮಕ್ಕೆ ಕರುನಾಡ ವಿಜಯ ಸೇನೆ ಆಗ್ರಹ

ಕಲಬುರಗಿ: ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ವೇದಮೂರ್ತಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರುನಾಡ ವಿಜಯ ಸೇನೆ ಕಲಬುರಗಿ ಜಿಲ್ಲಾ ಘಟಕ ಒತ್ತಾಯಿಸಿದೆ.
ಜಿಲ್ಲಾಧ್ಯಕ್ಷ ಪೃಥ್ವಿರಾಜ ಎಸ್. ರಾಂಪುರ ಮಾತನಾಡಿ, ಮಹನೀಯರ ಕುರಿತು ಅವಹೇಳನಕಾರಿ ಹೇಳಿಕೆಗಳು ಸಮಾಜದ ಭಾವನೆಗಳಿಗೆ ಧಕ್ಕೆ ತರುವುದರ ಜೊತೆಗೆ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ ಎಂದು ಖಂಡಿಸಿದರು.
ಈ ರೀತಿಯ ಹೇಳಿಕೆಗಳು ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಪೊಲೀಸ್ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ವೇದಮೂರ್ತಿ ವಿರುದ್ಧ ಸೂಕ್ತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪ ಸಾಬೀತಾದರೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಯಾವುದೇ ಮಹನೀಯರ ಕುರಿತು ಅವಹೇಳನಕಾರಿ ಹೇಳಿಕೆಗಳಿಗೆ ಅವಕಾಶ ನೀಡಬಾರದು ಎಂದು ಪೃಥ್ವಿರಾಜ ಎಸ್. ರಾಂಪುರ ಒತ್ತಾಯಿಸಿದ್ದಾರೆ.






