Kalaburagi | ಮಧ್ಯರಾತ್ರಿ ಆರೋಗ್ಯ ಕೇಂದ್ರಗಳಿಗೆ ಡಿಎಚ್ಒ ದಿಢೀರ್ ಭೇಟಿ, ಪರಿಶೀಲನೆ

ಕಲಬುರಗಿ: ಜಿಲ್ಲೆಯ ಆರೋಗ್ಯ ಸೇವೆಗಳ ಗುಣಮಟ್ಟ ಪರಿಶೀಲಿಸುವ ಉದ್ದೇಶದಿಂದ ನೂತನ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಿದ್ದರಾಮಪ್ಪ (ಸಿದ್ದು) ಪಾಟೀಲ್ ಅವರು ಮಧ್ಯರಾತ್ರಿ ಚಿತ್ತಾಪುರ ಸಾರ್ವಜನಿಕ ಆಸ್ಪತ್ರೆ, ವಾಡಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಾಲವಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿರುವ ಡಿಎಚ್ಒ, ಮೂರು ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಕರ್ತವ್ಯದಲ್ಲಿದ್ದ ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ ಮತ್ತು ಕಾರ್ಯವೈಖರಿಯನ್ನು ಪರಿಶೀಲಿಸಿದರು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ದೊರೆಯುತ್ತಿರುವ ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಈ ವೇಳೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಜವಾಬ್ದಾರಿಯಿಂದ ಸೇವೆ ಸಲ್ಲಿಸಬೇಕು. ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ಸೂಚಿಸಿದರು.
ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ತಿಳಿಸಿದರು. ಪರಿಶೀಲನೆ ವೇಳೆ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.




