Kalaburagi | ಆದಾಯ ಮೀರಿ ಆಸ್ತಿಗಳಿಕೆ ಆರೋಪ: ಜೆಸ್ಕಾಂ AEE ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ

ಕಲಬುರಗಿ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿಯ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ರಾಜೇಶ್ವರಿ ಬಬಲಾದ ಅವರ ನಿವಾಸಗಳು ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸಕ್ಕೆ ಬೆಳಗ್ಗೆಯೇ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳು, ಆಸ್ತಿ-ಪಾಸ್ತಿ ಹಾಗೂ ಹಣಕಾಸು ಸಂಬಂಧಿತ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ. ಇದೇ ವೇಳೆ ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ನಿವಾಸದ ಮೇಲೂ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಇದರ ಜೊತೆಗೆ ರಾಜೇಶ್ವರಿ ಅವರು ಕರ್ತವ್ಯ ನಿರ್ವಹಿಸುತ್ತಿರುವ ಜೆಸ್ಕಾಂ ಕಚೇರಿಯ ಮೇಲೂ ದಾಳಿ ನಡೆಸಿ, ಅಧಿಕೃತ ದಾಖಲೆಗಳ ಪರಿಶೀಲನೆ ಕೈಗೊಳ್ಳಲಾಗಿದೆ.
ಮೂಲಗಳ ಪ್ರಕಾರ, ರಾಜೇಶ್ವರಿ ಅವರು ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಮನೆಗೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅವರು ಮನೆಗೆ ಮರಳುವಷ್ಟರಲ್ಲಿ ಶೋಧ ಪ್ರಕ್ರಿಯೆ ಆರಂಭವಾಗಿತ್ತು ಎಂದು ತಿಳಿದುಬಂದಿದೆ.
ಆದಾಯಕ್ಕೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದ್ದು, ಪತ್ತೆಯಾಗಿರುವ ದಾಖಲೆಗಳು ಹಾಗೂ ಆಸ್ತಿ-ಪಾಸ್ತಿ ಕುರಿತು ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದೆ.






