Kalaburagi | ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ.ಆರ್.ಕೃಷ್ಣಪ್ಪ ನೇಮಕ

ಕಲಬುರಗಿ: ಬೆಂಗಳೂರಿನ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ಆರ್. ಕೃಷ್ಣಪ್ಪ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ಅವರು ಜುಲೈ 6ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಡಾ. ಕೃಷ್ಣಪ್ಪ ಅವರು ಕಿದ್ವಾಯಿ ಸಂಸ್ಥೆಯ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ 22 ವರ್ಷಗಳಿಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿರ ಮತ್ತು ಕುತ್ತಿಗೆ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕೃಷ್ಣಪ್ಪ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಸಂಸ್ಥೆ ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿದ್ದು, ರೋಗಿಗಳಿಗೆ ಉನ್ನತ ಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುತ್ತಿದೆ. ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಸಮಾನವಾದ ಅತ್ಯಾಧುನಿಕ ಕ್ಯಾನ್ಸರ್ ಆರೈಕೆ ಹಾಗೂ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೊಸ ವೈದ್ಯಕೀಯ ಉಪಕರಣಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಪ್ರಭಾರ ನಿರ್ದೇಶಕರಾಗಿ ಅವಕಾಶ ನೀಡಿದ ರಾಜ್ಯ ಸರ್ಕಾರ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಅವರು, ರೋಗಿಗಳಿಗೆ ಇನ್ನಷ್ಟು ಗುಣಮಟ್ಟದ ಮತ್ತು ಸುಲಭವಾಗಿ ಲಭ್ಯವಾಗುವ ಕ್ಯಾನ್ಸರ್ ಚಿಕಿತ್ಸಾ ಸೇವೆ ಒದಗಿಸಲು ಆದ್ಯತೆ ನೀಡುವುದಾಗಿ ಹೇಳಿದರು.






