Kalaburagi | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಡಿವೈಎಫ್‌ಐ, ಎಸ್‌ಎಫ್‌ಐ ಪ್ರತಿಭಟನೆ

ಕಲಬುರಗಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಲಡಾಖ್‌ನ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಮತ್ತು ಉಪವಾಸ ನಿರತ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ತಕ್ಷಣ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ (DYFI) ಮತ್ತು ಎಸ್‌ಎಫ್‌ಐ (SFI) ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಶಿಕ್ಷಣ ಹಾಗೂ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಹಾಗೂ ಪ್ರಜಾಪ್ರಭುತ್ವದ ಹೋರಾಟಗಳನ್ನು ನಿರ್ಲಕ್ಷಿಸದೆ ವಿದ್ಯಾರ್ಥಿ ಸಂಘಟನೆಗಳೊಂದಿಗೆ ತಕ್ಷಣ ಸಂವಾದ ನಡೆಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಜೊತೆಗೆ, ಲಡಾಖ್‌ನ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ತಕ್ಷಣ ಮಾತುಕತೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಡಿವೈಎಫ್‌ಐ ಲವಿತ್ರ ವಸ್ತ್ರದ್, ಎಸ್‌ಎಫ್‌ಐ ಮುಖಂಡರಾದ ಇಮಾಮ್ ಸಾಬ್ ನದಾಫ್, ನಾಗರಾಜ, ಅಜಯ, ಅಂಕಿತಾ, ಪ್ರೇಮ್, ಸರ್ವೇಶ್, ಅನಿತಾ, ತಾಯಣ್ಣ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.






