Kalaburagi | ಬರ ಪಟ್ಟಿಯಿಂದ ಆಳಂದ ತಾಲೂಕು ಕೈಬಿಟ್ಟಿರುವುದು ಖಂಡನೀಯ: ಹರ್ಷಾ ಎಸ್. ಗುತ್ತೇದಾರ

ಕಲಬುರಗಿ: ಪ್ರಸಕ್ತ ವರ್ಷ ಮಳೆ ಕೊರತೆಯಿಂದ ಆಳಂದ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರದ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಆಳಂದವನ್ನು ಕೈಬಿಟ್ಟಿರುವುದು ಖಂಡನೀಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾ ಎಸ್. ಗುತ್ತೇದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ತಾಲೂಕಿನ ಬಹುತೇಕ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಜಲಾಶಯಗಳು, ಕೆರೆ-ಕಟ್ಟೆಗಳು ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಕೈಕೊಟ್ಟಿರುವ ಪರಿಣಾಮ ರೈತರು ಮಾಡಿರುವ ಕೃಷಿ ವೆಚ್ಚವೂ ವ್ಯರ್ಥವಾಗುವ ಆತಂಕ ಎದುರಾಗಿದೆ ಎಂದು ತಿಳಿಸಿದ್ದಾರೆ.
ಆಳಂದ ತಾಲೂಕಿನ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಶಾಸಕ ಬಿ.ಆರ್. ಪಾಟೀಲ ವಿಫಲರಾಗಿದ್ದಾರೆ. ಅವರ ರೈತಪರ ಕಾಳಜಿ ಕೇವಲ ಭಾಷಣಕ್ಕೆ ಸೀಮಿತವಾಗಿದ್ದು, ಕಾರ್ಯರೂಪದಲ್ಲಿ ಕಾಣುತ್ತಿಲ್ಲ. ಬರದ ವಿಚಾರದಲ್ಲಿ ಶಾಸಕರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಸ್ಥಳೀಯ ವಾಸ್ತವಾಂಶಗಳನ್ನು ಪರಿಗಣಿಸಬೇಕಿತ್ತು. ಆದರೆ ಆಳಂದ ತಾಲೂಕಿನ ರೈತರ ಸಂಕಷ್ಟವನ್ನು ಕಡೆಗಣಿಸಿ ಬರ ಪಟ್ಟಿಯಿಂದ ತಾಲೂಕನ್ನು ಹೊರಗಿಟ್ಟಿರುವುದು ರೈತ ವಿರೋಧಿ ನಿರ್ಧಾರವಾಗಿದೆ ಎಂದು ಅವರು ಟೀಕಿಸಿದ್ದಾರೆ.
ಆಳಂದ ತಾಲೂಕಿನ ರೈತರಿಗೆ ಮಳೆ ಕೊರತೆಯ ಪರಿಣಾಮ ಕಣ್ಣಿಗೆ ಕಾಣುವಂತಿದೆ. ಹೊಲಗಳಲ್ಲಿ ಬೆಳೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆಯ ಆತಂಕವೂ ಎದುರಾಗಿದೆ. ಸರ್ಕಾರ ಕಚೇರಿ ದಾಖಲೆಗಳಿಗೆ ಮಾತ್ರ ಸೀಮಿತವಾಗದೆ ಗ್ರಾಮೀಣ ಪ್ರದೇಶಗಳಿಗೆ ತೆರಳಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಹರ್ಷಾ ಎಸ್. ಗುತ್ತೇದಾರ ಆಗ್ರಹಿಸಿದ್ದಾರೆ.
ತಕ್ಷಣವೇ ಆಳಂದ ತಾಲೂಕಿನ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ, ಜಲಮೂಲಗಳ ಸ್ಥಿತಿ ಹಾಗೂ ರೈತರ ಆರ್ಥಿಕ ನಷ್ಟದ ಕುರಿತು ಪುನರ್‌ಸಮೀಕ್ಷೆ ನಡೆಸಬೇಕು. ಆಳಂದ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ, ಅರ್ಹ ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ಸರ್ಕಾರದ ಬರ ಪರಿಹಾರ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.






