ಕಲಬುರಗಿ | ರಸಗೊಬ್ಬರ ಕೊರತೆ ನಿವಾರಣೆ, ವಿದ್ಯುತ್ ಖಾಸಗೀಕರಣ ಹಿಂಪಡೆಯಲು ರೈತರ ಆಗ್ರಹ

ಕಲಬುರಗಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ಮಾಡಬೇಕು ಹಾಗೂ ವಿದ್ಯುತ್ ಖಾಸಗೀಕರಣ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಮಂಗಳವಾರ ನಗರದ ನೆಹರು ಗಂಜ್‌ನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಬೇಕು, ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಕೃಷಿ ಚಟುವಟಿಕೆಗಳ ವೆಚ್ಚ ಹೆಚ್ಚಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ರೈತರ ಪರವಾಗಿ ನಿಲ್ಲಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರಗಳ ಕೊರತೆಯನ್ನು ತಕ್ಷಣ ನಿವಾರಿಸಿ, ರೈತರಿಗೆ ಸುಲಭವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಖಾಸಗೀಕರಣದಿಂದ ರೈತರು ಹಾಗೂ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇರುವುದರಿಂದ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷರಾದ ದೇವು ಬಿರಾದಾರ, ರೇವಣಸಿದ್ದಪ್ಪ ಪಾಟೀಲ, ಶರಣಪ್ಪ ವಚ್ಚಾ, ಸದಸ್ಯ ಭೀಮಶಾ ಬಡದಾಳ, ಸಿದ್ದು ಎಸ್.ಎಲ್. ಸೇರಿದಂತೆ ಸಂಘದ ಹಲವು ಪದಾಧಿಕಾರಿಗಳು ಹಾಗೂ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






