Kalaburagi | ಸಂಚಾರ ದಂಡ ಹೆಚ್ಚಳ ಮರುಪರಿಶೀಲಿಸಲು ರೈತ ಸಂಘಗಳ ಆಗ್ರಹ

ಕಲಬುರಗಿ: ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿರುವ ದಂಡವನ್ನು ಏಕಾಏಕಿ ಹಲವು ಪಟ್ಟು ಹೆಚ್ಚಿಸಿರುವ ಕ್ರಮವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಮರುಪರಿಶೀಲಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿವೆ.
ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿ ಪುತ್ಥಳಿ ಎದುರು ಪ್ರತಿಭಟನೆ ನಡೆಸಿದ ರೈತ ಸಂಘಗಳ ಮುಖಂಡರು, ಸಾರಿಗೆ ಇಲಾಖೆ, ಗೃಹ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದ ಜನರು ಈಗಾಗಲೇ ಬರ, ಬೆಲೆ ಏರಿಕೆ ಹಾಗೂ ಆರ್ಥಿಕ ಸಂಕಷ್ಟದಿಂದ ತತ್ತರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸುವ ದಂಡವನ್ನು ಹಲವು ಪಟ್ಟು ಹೆಚ್ಚಿಸಿರುವುದು ಸಾಮಾನ್ಯ ಜನರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರಿದಂತಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಆದರೆ ದಂಡ ವಿಧಿಸುವುದಕ್ಕೂ ಮುನ್ನ ಉತ್ತಮ ಗುಣಮಟ್ಟದ ರಸ್ತೆ, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ, ಫುಟ್‌ಪಾತ್, ಸೂಚನಾ ಫಲಕಗಳು ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.
ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ರಸ್ತೆ, ಪಾರ್ಕಿಂಗ್ ಹಾಗೂ ಸಂಚಾರ ದಟ್ಟಣೆಯ ಸಮಸ್ಯೆಗಳು ಮುಂದುವರಿದಿವೆ. ಮೊದಲು ಈ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಬೇಕು. ಬಳಿಕ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಿ, ಅಗತ್ಯವಿದ್ದಲ್ಲಿ ದಂಡದ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಮುಖಂಡರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಕರ್ನಾಟಕ ರಾಜ್ಯ ರೈತ ಸಂಘದ ಯುವ ಘಟಕದ ಅಧ್ಯಕ್ಷ ಕರೆಪ್ಪ ಕರಗೊಂಡ, ಶರಣಗೌಡ ಪಾಟೀಲ ಹಾಗೂ ಸಿದ್ದು ಎಸ್.ಎಲ್. ಸೇರಿದಂತೆ ರೈತ ಸಂಘಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






