ಕಲಬುರಗಿ | ನ.3ರಿಂದ ʼಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನʼ : ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಅಂಗವಾಗಿ ಕಲಬುರಗಿ ಜಿಲ್ಲೆಯಾದ್ಯಂತ ನ.3 ರಿಂದ ಡಿ.3 ರವರೆಗೆ ಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಅಭಿಯಾನದಿಂದ ಯಾವುದೇ ಜಾನುವಾರು ಬಿಟ್ಟು ಹೋಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಪಶು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಡಿಸಿ ಬಿ.ಫೌಝಿಯಾ ತರನ್ನುಮ್ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆ ಹಾಕಿಸುವುದು ಅತ್ಯಗತ್ಯವಾಗಿದೆ. ಅಭಿಯಾನ ಯಶಸ್ಸಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳು, ರೈತರ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಮುಖಾಂತರ ಪ್ರಚಾರ ಮಾಡಿ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ರೈತಾಪಿ ಜನರಲ್ಲಿ ಅರಿವು ಮೂಡಿಸಬೇಕು ಎಂದರು.
ಇನ್ನು ಅಭಿಯಾನ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಜಾನುವಾರುಗಳ ಮಾಲಕರು ತಮ್ಮ 4 ತಿಂಗಳ ಮತ್ತು ಮೇಲ್ಪಟ್ಟ ಎಲ್ಲಾ ದನ ಮತ್ತು ಎಮ್ಮೆಗಳಿಗೆ ಕಡ್ಡಾಯವಾಗಿ ಕಾಲು ಬಾಯಿ ರೋಗ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
412 ತಂಡ ರಚನೆ :
ನ.3ರಿಂದ ಡಿ.3 ವರೆಗೆ ಒಂದು ತಿಂಗಳ ಕಾಲ ನಡೆಯಲಿರುವ ಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನದಡಿ ಕಲಬುರಗಿ ಜಿಲ್ಲೆಯ ಎಲ್ಲಾ ಗ್ರಾಮಗಳ ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲು ಬಾಯಿ ರೋಗದ ವಿರುದ್ಧ ಲಸಿಕೆ ಹಾಕಲು ಇಲಾಖೆಯ ಅಧಿಕಾರಿ-ಸಿಬ್ಬಂದಿ ಹಾಗೂ ಲಸಿಕಾದಾರರು ಒಳಗೊಂಡ ಒಟ್ಟು 412 ತಂಡಗಳನ್ನು ರಚಿಸಲಾಗಿದೆ. ತಂಡಗಳು ಮನೆ ಮನೆಗೆ ಭೇಟಿ ನೀಡಿ ಜಿಲ್ಲೆಯ 3,37,933 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ(ಆಡಳಿತ) ಡಾ. ಸಂಜಯ ರೆಡ್ಡಿ ಅವರು ಸಭೆಯ ಗಮನಕ್ಕೆ ತಂದರು.
ಇದೇ ಸಂದರ್ಭದಲ್ಲಿ ಉಚಿತ ಲಸಿಕಾ ಅಭಿಯಾನದ ಪ್ರಚಾರ ಸಾಮಗ್ರಿಗಳಾದ ಪೋಸ್ಟರ್‌ಗಳನ್ನು ಡಿಸಿ ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಪಶು ವೈದ್ಯಕೀಯ ತರಬೇತಿ ಕೇಂದ್ರದ ಉಪನಿರ್ದೇಶಕ ಡಾ.ದಯಾನಂದ ಹಕ್ಕಾಪಕ್ಕಿ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಂಡಳಿಯ ಉಪನಿರ್ದೇಶಕ ಡಾ.ರವೀಂದ್ರ ಜಿ. ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಹಾಗೂ ನೋಡಲ್ ಅಧಿಕಾರಿಗಳು ಭಾಗವಹಿಸಿದ್ದರು.







