Kalaburagi | ಭೋವಿ-ವಡ್ಡರ ಸಮಾಜದ ಅರ್ಹ ಕಾರ್ಯಕರ್ತರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಿ: ಸುನಿಲ್ ದಂಡಗುಲ್ಕರ್

ಕಲಬುರಗಿ: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಭೋವಿ-ವಡ್ಡರ ಸಮಾಜದ ಅರ್ಹ ಮತ್ತು ಕ್ರಿಯಾಶೀಲ ಕಾರ್ಯಕರ್ತರಿಗೆ ರಾಜಕೀಯ ಪಕ್ಷಗಳು ಸ್ಪರ್ಧಿಸಲು ಅವಕಾಶ ಕಲ್ಪಿಸಿ, ಚುನಾವಣಾ ಟಿಕೆಟ್ ನೀಡಬೇಕು ಎಂದು ಅಖಿಲ ಕರ್ನಾಟಕ ಭೋವಿ-ವಡ್ಡರ ಸಮಾಜದ ಅಫಜಲಪುರ ತಾಲೂಕು ಅಧ್ಯಕ್ಷ ಸುನಿಲ್ ದಂಡಗುಲ್ಕರ್ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ಭೋವಿ-ವಡ್ಡರ ಸಮಾಜದ ಹಿರಿಯರು ಹಲವು ವರ್ಷಗಳಿಂದ ವಿವಿಧ ರಾಜಕೀಯ ಪಕ್ಷಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ. ಪಕ್ಷದ ಸಂಘಟನೆ ಬಲಪಡಿಸುವುದರ ಜತೆಗೆ ಸಾಮಾಜಿಕ ಸೇವೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಸಮಾಜದ ಹಿರಿಯರು ಹಾಗೂ ಮುಖಂಡರು ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಪಕ್ಷದ ನಾಯಕರು ಗುರುತಿಸಬೇಕು. ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಸಂಘಟನೆಗಾಗಿ ಶ್ರಮಿಸಿರುವ ಸಮಾಜದ ಅರ್ಹ ಕಾರ್ಯಕರ್ತರಿಗೆ ಅವರ ಸೇವೆ, ಅನುಭವ ಹಾಗೂ ಸಂಘಟನಾ ಸಾಮರ್ಥ್ಯದ ಆಧಾರದ ಮೇಲೆ ಚುನಾವಣಾ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ತಿಮ್ಮಯ್ಯ, ಸಂಜುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.






