Kalaburagi | ಉತ್ತಮ ನಾಗರಿಕರೇ ದೇಶದ ಅಭಿವೃದ್ಧಿಗೆ ಶಕ್ತಿ: ಬಸವರಾಜ ದೇಶಮುಖ

ಕಲಬುರಗಿ: ದೇಶದ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗೆ ಉತ್ತಮ ನಾಗರಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಾಗರಿಕ ಪೌರತ್ವ ಎಂದರೆ ಕೇವಲ ಹಕ್ಕುಗಳನ್ನು ಅನುಭವಿಸುವುದಲ್ಲ, ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದೂ ಆಗಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.
ನಗರದ ಗೋದುತಾಯಿ ಮಹಿಳಾ ಶಿಕ್ಷಣ (ಬಿ.ಎಡ್) ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಮಾಜದ ಭವಿಷ್ಯದ ನಿರ್ಮಾತೃಗಳಾಗಿದ್ದು, ವಿಶೇಷವಾಗಿ ಬಿ.ಎಡ್ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಶಿಕ್ಷಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಆದ್ದರಿಂದ ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ, ಮಾನವೀಯ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ಮಹಿಳೆಯರು ಶಿಕ್ಷಕರಾಗುವ ಮೂಲಕ ಮನೆ ಹಾಗೂ ಸಮಾಜದಲ್ಲಿ ಶಿಕ್ಷಣದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ರೇಣುಕಾ ಎಸ್ ಗುಬ್ಬೇವಾಡ್ ಅವರು ಮಾತನಾಡಿ, ಭಾರತದ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಬೋಧಿಸುತ್ತದೆ. ಪ್ರತಿಯೊಬ್ಬ ನಾಗರಿಕನು ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಬಳಸಬೇಕು, ಕಾನೂನುಗಳನ್ನು ಗೌರವಿಸಬೇಕು ಹಾಗೂ ಸಮಾಜದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.
ನಾಗರಿಕ ಪೌರತ್ವ ತರಬೇತಿ ಶಿಬಿರವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸೇವಾ ಮನೋಭಾವ ಹಾಗೂ ರಾಷ್ಟ್ರೀಯ ಏಕತೆಯ ಭಾವನೆಯನ್ನು ಬೆಳೆಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ ಕಾಲೇಜುಗಳ ನಿರ್ದೇಶಕರಾದ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿದರು.
ಪ್ರಾಚಾರ್ಯೆ ಡಾ.ಕಲ್ಪನಾ ಭೀಮಳ್ಳಿ ಪ್ರಾಸ್ತಾವಿಕ ಮಾತನಾಡಿದರೆ, ಸುಪ್ರಿಯಾ ನಾಗಶೆಟ್ಟಿ ಸ್ವಾಗತಿಸಿದರು. ಕು.ಭಾಗಮ್ಮ ಮತ್ತು ಕು. ಐಶ್ವರ್ಯ ನಿರೂಪಿಸಿದರು. ಸುಧಾ ಎಸ್.ಬಿ. ವಂದಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಇದ್ದರು.






