Kalaburagi | ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಅಕ್ರಮ ತಡೆಗೆ ಕಠಿಣ ಕ್ರಮ : ಎಚ್.ಎಂ.ರೇವಣ್ಣ

ಕಲಬುರಗಿ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದು, ಯೋಜನೆಗಳ ದುರುಪಯೋಗ ತಡೆದು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪುವಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆಗಳ ಅನುಷ್ಠಾನದ ವೇಳೆ ಪತ್ತೆಯಾದ ಅಕ್ರಮಗಳನ್ನು ತಡೆಯಲು ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ತಪ್ಪಾಗಿ ವರ್ಗಾವಣೆಯಾಗಿದ್ದ ಸುಮಾರು 14ರಿಂದ 15 ಕೋಟಿ ರೂ. ಮೊತ್ತವನ್ನು ವಾಪಸ್ ಪಡೆಯಲಾಗಿದೆ. ಇನ್ನೂ ಬಾಕಿ ಇರುವ ಸುಮಾರು 100 ಕೋಟಿ ರೂ. ಮೊತ್ತದ ವಸೂಲಾತಿಗೆ ಬ್ಯಾಂಕುಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ 9,156 ಮೃತ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಅವರ ಖಾತೆಗಳಿಗೆ ಒಟ್ಟು 4.27 ಕೋಟಿ ರೂ. ಜಮೆಯಾಗಿದೆ. ಈ ಪೈಕಿ 5,336 ಖಾತೆಗಳಲ್ಲಿ ಹಣ ವರ್ಗಾವಣೆಯನ್ನು ತಡೆಹಿಡಿಯಲಾಗಿದೆ. ಆದರೆ ಇದುವರೆಗೆ ಕೇವಲ 25.84 ಲಕ್ಷ ರೂ. ಮಾತ್ರ ವಸೂಲಾಗಿರುವುದಕ್ಕೆ ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು.
ಮೃತರ ಖಾತೆಗಳಿಗೆ ಹಣ ಜಮೆಯಾಗಿರುವುದು, ಒಂದೇ ಬ್ಯಾಂಕ್ ಖಾತೆಗೆ 20ಕ್ಕೂ ಹೆಚ್ಚು ಫಲಾನುಭವಿಗಳನ್ನು ಲಿಂಕ್ ಮಾಡಿರುವುದು ಹಾಗೂ ಬ್ಯಾಂಕ್ ಖಾತೆ ಇಲ್ಲದಿದ್ದರೂ ಹಣ ವರ್ಗಾವಣೆಯಾಗಿರುವಂತಹ ಗಂಭೀರ ಲೋಪಗಳು ಪತ್ತೆಯಾಗಿವೆ ಎಂದು ಅವರು ಹೇಳಿದರು.
ಮುಂದಿನ 8ರಿಂದ 10 ದಿನಗಳೊಳಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆ ಮನೆ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳಡಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಹಣವನ್ನು ಕೆಲವು ಬ್ಯಾಂಕುಗಳು ಹಳೆಯ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದು ನಿಯಮಬಾಹಿರವಾಗಿದ್ದು, ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸುವಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿ ನಿಯಮ ಉಲ್ಲಂಘಿಸಿದ 14 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗಿದೆ. ಅಲ್ಲದೆ, 6,874 ಬೋಗಸ್ ಪಡಿತರ ಚೀಟಿಗಳನ್ನು ರದ್ದುಪಡಿಸಿ, 9,631 ಕ್ವಿಂಟಾಲ್ ಅಕ್ರಮ ಆಹಾರ ಧಾನ್ಯಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜುಲೈ 2023ರಿಂದ ಡಿಸೆಂಬರ್ 2024ರವರೆಗೆ ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ ₹508.72 ಕೋಟಿ ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.
ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳಿಗೆ ಬಿಡುಗಡೆಯಾಗಬೇಕಿದ್ದ ಬಾಕಿ ಮೊತ್ತದಲ್ಲಿ ಶೇ.80ರಷ್ಟು, ಅಂದರೆ 608 ಕೋಟಿ ರೂ. ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ 124 ಹೆಚ್ಚುವರಿ ಬಸ್ ಶೆಡ್ಯೂಲ್‌ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಸುರಕ್ಷತೆ ಹಾಗೂ ಸಾರ್ವಜನಿಕ ಸೌಲಭ್ಯಗಳ ದೃಷ್ಟಿಯಿಂದ ಪೊಲೀಸ್ ಚೌಕಿ ಮತ್ತು ‘ನಮ್ಮ ಕ್ಲಿನಿಕ್’ ಆರಂಭಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಸ್ಥಗಿತಗೊಳಿಸುತ್ತದೆ ಎಂಬ ವದಂತಿಗಳಿಗೆ ಸ್ಪಷ್ಟನೆ ನೀಡಿದ ರೇವಣ್ಣ, “ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ಎಂದಿನಂತೆ ಮುಂದುವರಿಯಲಿವೆ. ಆದರೆ ಆದಾಯ ತೆರಿಗೆ ಪಾವತಿದಾರರು ಅಥವಾ ತಪ್ಪು ಮಾಹಿತಿ ನೀಡಿ ಅನರ್ಹವಾಗಿ ಸೌಲಭ್ಯ ಪಡೆಯುತ್ತಿರುವವರನ್ನು ಗುರುತಿಸಿ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಸಂಕನೂರ, ಉಪಾಧ್ಯಕ್ಷರಾದ ವಿಜಯಕುಮಾರ ಕಟ್ಟಿಮನಿ, ಸೋಮಶೇಖರ ಹಿರೇಮಠ, ಸುರೇಶ್ ತಿಪ್ಪಶೆಟ್ಟಿ, ನರಸಿಂಹಲು ಕುಂಬಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






