Kalaburagi | ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹಿಸಿ ಮಾನವ ಸರಪಳಿ

ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ, ನಾಗರಿಕರ ಹಕ್ಕುಗಳ ರಕ್ಷಣಾ ಆಂದೋಲನದ ವತಿಯಿಂದ ಮಂಗಳವಾರ ನಗರದ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ದೇಶದ 14 ಕೋಟಿಗೂ ಅಧಿಕ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಅಪಾಯವಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡಬೇಕು. ಮತದಾರರ ಪಟ್ಟಿಯಲ್ಲಿರುವ ನೈಜ ಮತದಾರರ ಹೆಸರುಗಳನ್ನು ಕೈಬಿಡುವ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಧಕ್ಕೆ ತರಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರು ಅನಗತ್ಯ ತೊಂದರೆ ಎದುರಿಸುವಂತಾಗಿದೆ. ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸುವ ಬದಲು, ಅರ್ಹ ಮತದಾರರ ಹೆಸರುಗಳನ್ನು ಕೈಬಿಡುವ ಸಾಧ್ಯತೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಹಾಗೂ ಸ್ವಾಯತ್ತತೆಯನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.
ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಚುನಾವಣಾ ಆಯೋಗದ ಕ್ರಮಗಳನ್ನು ಖಂಡಿಸಿದ ಅವರು, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಅದನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು ಎಂದು ಹೇಳಿದರು.
ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸುವುದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವುದು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ನಾಗರಿಕರ ಹಕ್ಕುಗಳ ರಕ್ಷಣಾ ಆಂದೋಲನದ ಸಲೀಮ್ ಚಿತ್ತಾಪುರಿ, ಅಫಝಲ್ ಮಹಿಮೂದ್, ನ್ಯಾಯವಾದಿ ಅಬ್ದುಲ್ ಜಬ್ಬಾರ್, ಮಹೇಶ್ ಎಸ್.ಬಿ., ರಾಜಾ ಪಟೇಲ್, ಹೈದರ್ ಬಾಗಬಾನ್, ಮೊಹಮ್ಮದ್ ನೂರ್, ಮೌಲಾ ಮುಲ್ಲಾ, ಅಬ್ದುಲ್ ಖಾದರ್, ಎಸ್.ಎಂ. ಶರ್ಮಾ, ಹನಮಂತ ಎಸ್.ಎಚ್., ಗೋವಿಂದ ಯಳವಾರ, ಯುವರಾಜ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.






