Kalaburagi | ಜಿಪಂ, ತಾಪಂ ಕ್ಷೇತ್ರಗಳ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ: ಸದ್ದಾಂ ವಜೀರಗಾಂವ ಆರೋಪ

ಕಲಬುರಗಿ: ಕಲಬುರಗಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯಿತಿ (ತಾ.ಪಂ.) ಕ್ಷೇತ್ರಗಳ ಮೀಸಲಾತಿ ನಿಗದಿಯಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ. ಪ್ರತಿ ತಾಲ್ಲೂಕಿನಲ್ಲೂ ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡುವಂತೆ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯದರ್ಶಿ ಸದ್ದಾಂ ವಜೀರಗಾಂವ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.
ಮೀಸಲಾತಿ ನಿಗದಿಯಲ್ಲಿ ಕಾಂಗ್ರೆಸ್ ಪಕ್ಷ ಅನುಸರಿಸಿರುವ ನೀತಿಯಿಂದ ದಲಿತ ಸಮುದಾಯದ ಎಡ ಮತ್ತು ಬಲ ವರ್ಗಗಳ ನಾಯಕತ್ವಕ್ಕೆ ತೀವ್ರ ಹಿನ್ನಡೆಯಾಗಿದೆ. ಹಿಂದುಳಿದ ವರ್ಗಗಳಿಗೂ ಸೂಕ್ತ ಮೀಸಲಾತಿ ದೊರೆಯದಂತೆ ಮಾಡಲಾಗಿದ್ದು, ಅಲ್ಪಸಂಖ್ಯಾತರ ಹಿತಾಸಕ್ತಿಯನ್ನೂ ಕಡೆಗಣಿಸಲಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.
ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದ ನಿಲುವು ಹಾಗೂ ಕಾರ್ಯವೈಖರಿಯಲ್ಲಿ ವ್ಯತ್ಯಾಸವಿದೆ. ಕಲಬುರಗಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ಸಂಪೂರ್ಣ ಅನ್ಯಾಯವಾಗಿದೆ. ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮೀಸಲಾತಿ ನಿಗದಿಪಡಿಸಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.
ಕೂಡಲೇ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯಗಳಿಗೆ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ದೊರೆಯುವಂತೆ ಮೀಸಲಾತಿ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸದ್ದಾಂ ವಜೀರಗಾಂವ ಆಗ್ರಹಿಸಿದ್ದಾರೆ.






