ಕಲಬುರಗಿ | ದೊಡ್ಡಪ್ಪ ಅಪ್ಪ ಪದವಿಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕಲಬುರಗಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಗರದ ದೊಡ್ಡಪ್ಪ ಅಪ್ಪ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉತ್ಸಾಹದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶರಣಬಸವೇಶ್ವರ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ. ರಾಮಕೃಷ್ಣರೆಡ್ಡಿ ಮಾತನಾಡಿ, ಸದೃಢ ದೇಹದಲ್ಲಿ ಸದೃಢ ಮನಸ್ಸನ್ನು ನಿರ್ಮಿಸುವುದೇ ಶಿಕ್ಷಣದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಅತ್ಯಂತ ಮಹತ್ವದ್ದಾಗಿದ್ದು, ಯೋಗವು ಆರೋಗ್ಯಕರ ಜೀವನಶೈಲಿಗೆ ಉತ್ತಮ ಮಾರ್ಗವಾಗಿದೆ ಎಂದು ತಿಳಿಸಿದರು.
ಯೋಗ ದಿನಾಚರಣೆಯನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ಪ್ರತಿದಿನ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು. ದೇಹವು ರೋಗಮುಕ್ತ ಹಾಗೂ ಆರೋಗ್ಯಯುತವಾಗಿರಬೇಕಾದರೆ ಯೋಗ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.
ಈ ವರ್ಷದ ಅಂತರರಾಷ್ಟ್ರೀಯ ಯೋಗ ದಿನದ ಘೋಷವಾಕ್ಯವಾದ “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಚಿಕ್ಕ ವಯಸ್ಸಿನಲ್ಲಿಯೇ ವೃದ್ಧಾಪ್ಯದ ಲಕ್ಷಣಗಳು ಕಾಣಿಸದಂತೆ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತ ಯೋಗಾಭ್ಯಾಸ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಇದಲ್ಲದೆ, ಆರೋಗ್ಯಕರ ಜೀವನಕ್ಕಾಗಿ ವಿಷಮುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಬಳಿಕ ಡಾ. ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಮತ್ತು ವಿವಿಧ ಆಸನಗಳ ಪ್ರಾತ್ಯಕ್ಷಿಕೆ ನಡೆಯಿತು. ಕಾಲೇಜಿನ ಸಿಬ್ಬಂದಿ ಹಾಗೂ ಐದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.






