ಕಲಬುರಗಿ | ಕಲ್ಯಾಣ ಪಥ ಯೋಜನೆಗೆ ಚಾಲನೆ; ಸಮಾರಂಭದ ಸ್ಥಳ ಪರಿಶೀಲಿಸಿದ ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ವತಿಯಿಂದ ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮಾದರಿಯಲ್ಲಿ ಒಟ್ಟು 1,166 ಕಿ.ಮೀ. ಉದ್ದದ ರಸ್ತೆಗಳನ್ನು 1,000 ಕೋಟಿ ರೂ. (ಕೆಕೆಆರ್‌ಡಿಬಿ ಅನುದಾನ) ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಯೋಜನೆಗೆ ಮಾ.8 ರ ಬೆಳಗ್ಗೆ 11 ಕ್ಕೆ ಚಾಲನೆ ನೀಡಲಾಗುತ್ತಿದೆ.
ಈ ಯೋಜನೆಯ ಪ್ರಾರಂಭೋತ್ಸವ ಸಮಾರಂಭ ನಡೆಯುತ್ತಿರುವ ಜೇವರ್ಗಿಯ ಕಟ್ಟಿ ಸಂಗಾವಿಯ ಬಳಿಯ ಧರಂಸಿಂಗ್ ಸ್ಮರಣಾರ್ಥ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಮೈದಾನಕ್ಕೆ ಶುಕ್ರವಾರ ರಾತ್ರಿ ಕೆಕೆಆರ್‌ಡಿಬಿ ಅಧ್ಯಕ್ಷರು, ಜೇವರ್ಗಿ ಶಾಸಕರೂ ಆಗಿರುವ ಡಾ.ಅಜಯ್ ಧರ್ಮಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.
ಕಳೆದ 4 ದಿನದಿಂದ ಸಮಾರಂಭಕ್ಕಾಗಿ ಭರದ ಸಿದ್ಧತೆಗಳಲ್ಲಿ ಸಾಗಿದ್ದವು. ಶುಕ್ರವಾರ ಅವೆಲ್ಲವೂ ಅಂತಿಮ ಹಂತ ತಲುಪಿರೋದನ್ನ ಖುದ್ದು ಡಾ.ಅಜಯ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾ.8 ಮಹಿಳಾ ದಿನವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸ್ವಸಹಾಯ ಗುಂಪಿನ ಮಹಿಳೆಯಯರನ್ನು ಸಮಾರಂಭದಲ್ಲಿ ಪಾಲ್ಗೊಳ್ಳುವಂತಹ ವ್ಯವಸ್ಥೆ ಮಾಡಲಾಗಿದೆ.
ಮೈದಾನದಲ್ಲಿ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಗಣ್ಯರ ಊಟೋಪಚಾರಕ್ಕಾಗಿ ಧರಂಸಿಂಗ್ ಕಲ್ಯಾಣ ಮಂಟಪದಲ್ಲಿ ಸೌಲಭ್ಯ ಕಲ್ಪಿಸಲಾಗಿದೆ. ಇನ್ನು ಸಾರ್ವಜನಿಕರ ಊಟೋಪಚಾರಕ್ಕೆ ಮೈದಾನದಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಗಣ್ಯರ ಊಟೋಪಚಾರ, ಆಸನ ವ್ಯವಸ್ಥೆ, ಸಾರ್ವಜನಿಕರಿಗೆ ಕುಡಿಯುವ ನೀರು, ಊಟೋಪಚಾರದ ಅನುಕೂಲಗಳನ್ನೆಲ್ಲ ಎಲ್ಲೆಲ್ಲಿ ಮಾಜಿರೋದು, ವಾಹನಗಳ ನಿಲುಗಡೆಗೆ ಸ್ಥಳವಕಾಶ ಇವೆಲ್ಲವನ್ನೂ ಡಾ.ಅಜಯ್ ಸಿಂಗ್ ಪರಿಶೀಲಿಸಿದರು. ತಹಶೀಲ್ದಾರ್ ಮಲ್ಲಣ್ಣ ಯಲಗಡ್ ಸೇರಿದಂತೆ ತಾಲೂಕು ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳಿದ್ದು ಶಾಸಕರ ಸಲಹೆ- ಸೂಚನೆಗಳನ್ನು ಪಾಲಿಸಿ ಸೂಕ್ತ ತಯಾರಿ ಭರವಸೆ ನೀಡಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲ್ಯಾಣ ಪಥ ಯೋಜನೆಯ ಪ್ರಾರಂಭೋತ್ಸವಕ್ಕೆ ಚಾಲನೆ ನೀಡುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಅತಿಥಿಗಳಾಗಿ ಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ರಾಜ್ಯದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಬಿ.ಜೆಡ್.ಝಮೀರ್ ಅಹ್ಮದ್ ಖಾನ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ್ ಬಿ.ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಶಿವರಾಜ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಂಪನಗೌಡ ಬಾದರ್ಲಿ, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ. ಪಾಟೀಲ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಸೇೇೇರಿದಂತೆ ಕಲ್ಯಾಣ ಭಾಗದ ಸಂಸದರು ಪಾಲ್ಗೊಳ್ಳುತ್ತಿದ್ದಾರೆ. ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.







