Kalaburagi | ಡಾ.ದಾಕ್ಷಾಯಿಣಿ ಅವ್ವಾಜಿಗೆ ‘ಕಲ್ಯಾಣ ಕರ್ನಾಟಕ ರತ್ನ’ ಪ್ರಶಸ್ತಿ

ಕಲಬುರಗಿ: ಸಮಾಜ ಸೇವೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ಅಪಾರ ಕೊಡುಗೆಯನ್ನು ಗುರುತಿಸಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಅವರಿಗೆ ದೆಹಲಿ ಕರ್ನಾಟಕ ಸಂಘ ಹಾಗೂ ಕಲ್ಯಾಣ ಕನ್ನಡಿಗರ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಪ್ರತಿಷ್ಠಿತ ‘ಕಲ್ಯಾಣ ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸೆ. 27ರಂದು ನವದೆಹಲಿಯಲ್ಲಿ ಆಯೋಜಿಸಿದ್ದ ವರ್ಣರಂಜಿತ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಅವರ ಪರವಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಪ್ರಶಸ್ತಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ರೇಣುಕುಮಾರ್ ಆರ್. ಸೇರಿದಂತೆ ದೆಹಲಿ ಕರ್ನಾಟಕ ಸಂಘ ಹಾಗೂ ಕಲ್ಯಾಣ ಕನ್ನಡಿಗರ ಸಾಂಸ್ಕೃತಿಕ ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಶಸ್ತಿ ಪ್ರದಾನ ಬಳಿಕ ಮಾತನಾಡಿದ ರೇಣುಕುಮಾರ್ ಅವರು, ಶಿಕ್ಷಣ ಕ್ಷೇತ್ರದಲ್ಲಿ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಸಲ್ಲಿಸುತ್ತಿರುವ ಸೇವೆಯನ್ನು ಶ್ಲಾಘಿಸಿದರು. ಸಮಾಜದ ಅಗತ್ಯವಿರುವವರ ಬಗ್ಗೆ ಅವರು ಹೊಂದಿರುವ ಕಾಳಜಿ ಹಾಗೂ ಶಿಕ್ಷಣದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ ಎಂದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಅಧೀನದಲ್ಲಿರುವ ವಿವಿಧ ಶೈಕ್ಷಣಿಕ ಸಂಸ್ಥೆಗಳನ್ನು ಸಮರ್ಥವಾಗಿ ಮುನ್ನಡೆಸುವ ಮೂಲಕ ಅವುಗಳ ಶೈಕ್ಷಣಿಕ ಪ್ರಗತಿ ಹಾಗೂ ಸರ್ವತೋಮುಖ ಶ್ರೇಷ್ಠತೆಗೆ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಶ್ರಮಿಸುತ್ತಿರುವುದನ್ನು ಅವರು ವಿಶೇಷವಾಗಿ ಉಲ್ಲೇಖಿಸಿದರು.






