Kalaburagi | ವಸತಿ ನಿಲಯದಲ್ಲಿ ಪೊಲೀಸ್ ಚೌಕಿ ನಿರ್ಮಿಸಲು ಕರವೇ ಆಗ್ರಹ

ಕಲಬುರಗಿ : ನಗರದ ರಾಜಾಪುರದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ತಕ್ಷಣ ಪೊಲೀಸ್ ಚೌಕಿ ನಿರ್ಮಿಸಬೇಕು ಹಾಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ ನಾಲವಾರಕರ್ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ನಿಲಯಗಳಲ್ಲಿ ನಡೆಯುತ್ತಿರುವ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ರಾಜಾಪುರದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಚಿತ್ತಾಪುರ ಮೂಲದ, ಕಲಬುರಗಿ ನಗರದ ಐಟಿಐ ವಿದ್ಯಾರ್ಥಿ ಸುಮಿತ್ (ರಾಜಶೇಖರ ಹೊಳ್ಳಿ ಅವರ ಪುತ್ರ) ಅವರ ಮೇಲೆ ಸೆ.29ರಂದು ಮಧ್ಯರಾತ್ರಿ 12ರಿಂದ ಬೆಳಗಿನ ಜಾವ 5ರವರೆಗೆ ವಸತಿ ನಿಲಯದ ವಿದ್ಯಾರ್ಥಿಗಳಾದ ರೋಷನ, ಶರಣು, ಲಕ್ಷ್ಮಣ ಹಾಗೂ ಮತ್ತೊಬ್ಬ ಸುಮಿತ್ ಹಣ ತರುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು.
ಈ ಕುರಿತು ಸೆ.30ರಂದು ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 104/2026ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪೊಲೀಸರು ಇಬ್ಬರು ಆರೋಪಿಗಳನ್ನು ಮಾತ್ರ ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ನವೆಂಬರ್ 6ರಂದು ಬೆಳಗಿನ ಜಾವ ಇದೇ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಘಟನೆಗೆ ಈ ನಿರ್ಲಕ್ಷ್ಯವೇ ಕಾರಣ ಎಂದು ಮಂಜುನಾಥ ನಾಲವಾರಕರ್ ಆರೋಪಿಸಿದರು.
ಈ ಎರಡು ಘಟನೆಗಳಿಂದ ವಸತಿ ನಿಲಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಕೆಲವು ಕಿಡಿಗೇಡಿಗಳು ತೊಂದರೆ ಉಂಟುಮಾಡುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳ ಸುರಕ್ಷತೆಗಾಗಿ ವಸತಿ ನಿಲಯದ ಆವರಣದಲ್ಲಿ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಪೊಲೀಸ್ ಚೌಕಿ ನಿರ್ಮಿಸಿ, ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜು ಹಾವನೂರು, ರವಿ ವಾಲಿ, ಶರಣು ಹೊಸಮನಿ ಮುಂತಾದವರು ಉಪಸ್ಥಿತರಿದ್ದರು.






