Kalaburagi | ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ, ಸಾಹಿತಿ ಚಂದ್ರಕಲಾ ಬಿದರಿ ನಿಧನ

ಚಂದ್ರಕಲಾ ಬಿದರಿ
ಕಲಬುರಗಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ, ಖ್ಯಾತ ಸಾಹಿತಿ ಹಾಗೂ ನಿವೃತ್ತ ಪ್ರಾಚಾರ್ಯೆ ಡಾ. ಚಂದ್ರಕಲಾ ಬಿದರಿ (63) ಅವರು ಶುಕ್ರವಾರ ಬೆಳಗ್ಗೆ ನಗರದ ತಮ್ಮ ನಿವಾಸದಲ್ಲಿ ನಿಧನರಾದರು.
ಕಳೆದ ಕೆಲವು ತಿಂಗಳುಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಾಣಿಸದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಅವರನ್ನು ಕಲಬುರಗಿಗೆ ಕರೆತರಲಾಗಿತ್ತು. ನಗರದ ಕೋಟನೂರ (ಡಿ) ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು.
ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ಡಾ. ಚಂದ್ರಕಲಾ ಬಿದರಿ ಅವರು ಹಲವಾರು ಕೃತಿಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದರು. ಅವರ ಸಾಹಿತ್ಯ ಸೇವೆಯನ್ನು ಗುರುತಿಸಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು.
ಶಿಕ್ಷಕಿ ಹಾಗೂ ಪ್ರಾಚಾರ್ಯೆಯಾಗಿ ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದ ಅವರು, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅಪಾರ ಗೌರವ ಸಂಪಾದಿಸಿದ್ದರು. ಅವರ ಅಗಲಿಕೆಗೆ ಸಾಹಿತ್ಯ, ಶಿಕ್ಷಣ ಹಾಗೂ ಸಾಂಸ್ಕೃತಿಕ ವಲಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಡಾ. ಚಂದ್ರಕಲಾ ಬಿದರಿ ಅವರು ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪುತ್ರರಲ್ಲಿ ಒಬ್ಬರಾದ ಚೇತನ್ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.






