Kalaburagi | ಸುಸೂತ್ರವಾಗಿ ನಡೆದ ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ
29 ಕೇಂದ್ರಗಳಲ್ಲಿ 11,745 ಅಭ್ಯರ್ಥಿಗಳ ನೋಂದಣಿ

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 319 ಹುದ್ದೆಗಳ ನೇಮಕಾತಿಗಾಗಿ ರವಿವಾರ ಜಿಲ್ಲೆಯಲ್ಲಿ ನಡೆದ ಪೂರ್ವಭಾವಿ ಪರೀಕ್ಷೆ ಬಿಗಿ ಪೊಲೀಸ್ ಭದ್ರತೆಯ ನಡುವೆ ಸುಸೂತ್ರವಾಗಿ ನಡೆಯಿತು.
ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 11,745 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಿತು.
ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಯಿತು. ಅಭ್ಯರ್ಥಿಗಳನ್ನು ಮೆಟಲ್ ಡಿಟೆಕ್ಟರ್ ಮೂಲಕ ಪರಿಶೀಲಿಸುವುದರ ಜತೆಗೆ, ಫೇಸ್ ರೆಕಗ್ನಿಷನ್ ತಂತ್ರಜ್ಞಾನದ ಮೂಲಕ ಮುಖದ ಗುರುತನ್ನು ದೃಢಪಡಿಸಿದ ಬಳಿಕವೇ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ನೀಡಲಾಯಿತು. ಪ್ರತಿ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಪ್ಯಾರಾಮೆಡಿಕಲ್ ಹಾಗೂ ಇಎನ್ಟಿ ಸಿಬ್ಬಂದಿಯನ್ನೂ ನಿಯೋಜಿಸಲಾಗಿತ್ತು.
ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ 29 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನ. 15ರ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್)-2023ರ ಸೆಕ್ಷನ್ 126 ಮತ್ತು 129ರ ಅಡಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಒಟ್ಟಾರೆ, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆಯಿತು.






