Kalaburagi | ಸರ್ಕಾರಿ ಶಾಲೆಗಳ ಸ್ಥಿತಿಗತಿ ಪರಿಶೀಲನೆಗೆ ಕೆಆರ್‌ಎಸ್ ಶಿಕ್ಷಣ ಕ್ರಾಂತಿ ಅಭಿಯಾನ : ಸಚಿನ್ ಚವ್ಹಾಣ್

ಕಲಬುರಗಿ: ಜಿಲ್ಲೆಯ ಸರ್ಕಾರಿ ಶಾಲೆಗಳು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ಮೂಲಸೌಕರ್ಯ, ಶೈಕ್ಷಣಿಕ ಗುಣಮಟ್ಟ ಮತ್ತು ಸರ್ಕಾರದ ಯೋಜನೆಗಳ ಅನುಷ್ಠಾನದ ನೈಜ ಸ್ಥಿತಿಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ ‘ಕಲ್ಯಾಣ ಕರ್ನಾಟಕ ಶಿಕ್ಷಣ ಕ್ರಾಂತಿ ಅಭಿಯಾನ’ ಹಮ್ಮಿಕೊಂಡಿದೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಸಚಿನ್ ಚವ್ಹಾಣ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳ ಸರ್ಕಾರಿ ಶಾಲೆಗಳು ಹಾಗೂ ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.
ಕಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಹಿಂದುಳಿದ ವರ್ಗಗಳ, ಉರ್ದು ಹಾಗೂ ಇಂದಿರಾ ಗಾಂಧಿ ವಸತಿ ಶಾಲೆಗಳು ಸೇರಿದಂತೆ ಎಲ್ಲಾ ಸರ್ಕಾರಿ ವಸತಿ ನಿಲಯಗಳಿಗೆ ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷರು ಭೇಟಿ ನೀಡಲಿದ್ದಾರೆ. ಶಾಲಾ ಕಟ್ಟಡಗಳ ಸ್ಥಿತಿ, ಶಿಕ್ಷಕರ ಕೊರತೆ, ಬಿಸಿಯೂಟ ಯೋಜನೆ, ಪಠ್ಯಪುಸ್ತಕ ವಿತರಣೆ, ಕಂಪ್ಯೂಟರ್ ಹಾಗೂ ಗ್ರಂಥಾಲಯ ಸೌಲಭ್ಯ, ರಸ್ತೆ, ಶೌಚಾಲಯ, ಕುಡಿಯುವ ನೀರು, ಆಟದ ಮೈದಾನ ಮತ್ತು ವಿದ್ಯಾರ್ಥಿಗಳಿಗೆ ನೀಡುವ ಶೂ-ಸಾಕ್ಸ್ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ನೈಜ ವರದಿ ಸಂಗ್ರಹಿಸಲಾಗುವುದು ಎಂದು ತಿಳಿಸಿದರು.
ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳು, ಬಿಸಿಯೂಟ ಯೋಜನೆ, ಸರ್ವ ಶಿಕ್ಷಣ ಅಭಿಯಾನ, ಶಿಕ್ಷಣ ಹಕ್ಕು ಕಾಯ್ದೆ ಹಾಗೂ ವಿವಿಧ ಶಿಕ್ಷಣ ಯೋಜನೆಗಳ ಅನುಷ್ಠಾನವನ್ನೂ ಪರಿಶೀಲಿಸಲಾಗುವುದು. ಶಿಕ್ಷಣ ಇಲಾಖೆ, ಕೆಕೆಆರ್‌ಡಿಬಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ವಿವಿಧ ನಿಗಮ-ಮಂಡಳಿಗಳ ಮೂಲಕ ಬಿಡುಗಡೆಯಾಗಿರುವ ಅನುದಾನ ಸಮರ್ಪಕವಾಗಿ ಬಳಕೆಯಾಗಿದೆಯೇ ಎಂಬುದನ್ನೂ ಪರಿಶೀಲಿಸಲಾಗುವುದು ಎಂದು ಹೇಳಿದರು.
ಶಾಲಾ ಕಟ್ಟಡ ದುರಸ್ತಿ, ಕಾಂಪೌಂಡ್, ಶೌಚಾಲಯ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ವೆಚ್ಚವಾಗಿದ್ದರೂ ಅನೇಕ ಶಾಲೆಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರದ ನೈಜ ಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಚಿನ್ ಚವ್ಹಾಣ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿವಪುತ್ರ ಗರೂರ, ಸೀತಾರಾಮ, ಮೋಸಿನ್ ಪಟೇಲ್, ಅಶೋಕ ಹಾಗೂ ರಿಯಾಜ್ ಉಪಸ್ಥಿತರಿದ್ದರು.






