ಕಲಬುರಗಿ | ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಜಾಥಾಗೆ ಚಾಲನೆ

ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.)-2026 ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ (SVEEP) ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ನಗರದ ಜಗತ್ ವೃತ್ತದಲ್ಲಿ ಚುನಾವಣಾ ಆಯೋಗ, ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಾಥಾಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ಸಂಕನೂರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 30ರಿಂದ ಜುಲೈ 29ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದು ಹಾಗೂ ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಪರಿಷ್ಕರಣೆ ಅವಧಿಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ ಮನೆಗೆ ಭೇಟಿ ನೀಡಿ ಗಣತಿದಾರರ ನಮೂನೆ (Enumeration Form) ಹಾಗೂ ಘೋಷಣಾ ಪತ್ರ (Declaration Form) ವಿತರಿಸಲಿದ್ದಾರೆ. ಸಾರ್ವಜನಿಕರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಹೆಸರುಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವುದು ಪ್ರಜಾಪ್ರಭುತ್ವವನ್ನು ಬಲಪಡಿಸುವ ಮಹತ್ವದ ಅಂಶವಾಗಿದೆ ಎಂದು ಹೇಳಿದರು.
ಜಗತ್ ವೃತ್ತದಿಂದ ಆರಂಭವಾದ ಜಾಗೃತಿ ಜಾಥಾ ಅನ್ನಪೂರ್ಣ ಕ್ರಾಸ್, ಲಾಹೋಟಿ ಪೆಟ್ರೋಲ್ ಬಂಕ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಮತದಾರರ ನೋಂದಣಿ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಜಾಗೃತಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ, ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಸೂರ್ಯಕಾಂತ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ್ ಅಕ್ಕಣ್ಣ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಚೆನ್ನಪ್ಪ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾಗೃತಿ ಅಭಿಯಾನದಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರು, ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸ್ವಯಂಸೇವಕರು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು), ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.






