ಕಲಬುರಗಿ| ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಯುವಜನತೆಯನ್ನು ತಂಬಾಕು ವ್ಯಸನದಿಂದ ದೂರವಿರಿಸಿ, ಆರೋಗ್ಯಕರ ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಿಸುವ ಉದ್ದೇಶದಿಂದ ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಶುಕ್ರವಾರ ‘ತಂಬಾಕು ಮುಕ್ತ ಯುವ ಅಭಿಯಾನ 4.0’ಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿದ್ದರಾಮಪ್ಪ ಪಾಟೀಲ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅಮರದೀಪ್ ಪವಾರ ಅವರು ಜಂಟಿಯಾಗಿ ಅಭಿಯಾನ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅಮರದೀಪ್ ಪವಾರ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ತಂಬಾಕು ಮುಕ್ತ ಯುವ ಅಭಿಯಾನ 4.0ರ ಭಾಗವಾಗಿ ತಂಬಾಕು ಮುಕ್ತ ಪ್ರತಿಜ್ಞೆ ಸ್ವೀಕರಿಸುವಲ್ಲಿ ಕಲಬುರಗಿ ಜಿಲ್ಲೆ ಕರ್ನಾಟಕದಲ್ಲೇ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಎನ್‌ಟಿಸಿಪಿ ಅಧಿಕಾರಿಗಳ ಮಾರ್ಗದರ್ಶನ, ವೈದ್ಯರು, ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಆರೋಗ್ಯ ಕಾರ್ಯಕರ್ತರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿದ್ದರಾಮಪ್ಪ ಪಾಟೀಲ ಮಾತನಾಡಿ, ಯುವಜನರಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು, ತಂಬಾಕು ಸೇವನೆಯ ಆರಂಭವನ್ನೇ ತಡೆಗಟ್ಟುವುದು ಹಾಗೂ ತಂಬಾಕು ಮುಕ್ತ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಅಭಿಯಾನದ ಯಶಸ್ವಿ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳ ಸಮನ್ವಯ, ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ, ಸಮುದಾಯ ಮಟ್ಟದಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕೋಟ್ಪಾ ಕಾಯ್ದೆ-2003ರ ಪರಿಣಾಮಕಾರಿ ಅನುಷ್ಠಾನ ಹಾಗೂ ತಂಬಾಕು ವ್ಯಸನ ಮುಕ್ತಿಗಾಗಿ ಸಮಾಲೋಚನಾ ಸೇವೆಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ತಂಬಾಕು ಮುಕ್ತ ಜಿಲ್ಲೆಯ ನಿರ್ಮಾಣಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ಕೈಗೊಳ್ಳಲಾಯಿತು.
ಮುಖ್ಯ ದಂತ ಆರೋಗ್ಯಾಧಿಕಾರಿ ಹಾಗೂ ಎನ್‌ಒಎಚ್‌ಪಿ ಜಿಲ್ಲಾ ನೋಡಲ್ ಅಧಿಕಾರಿ ಡಾ. ರಾಜು ರಾಂಪುರೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಸುಜಾತಾ ಪಾಟೀಲ, ಸೋಷಿಯಲ್ ವರ್ಕರ್ ಆರತಿ ಧಶ್ರೀ ಸೇರಿದಂತೆ ಜಿಲ್ಲೆಯ ದಂತ ಆರೋಗ್ಯಾಧಿಕಾರಿಗಳು, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ತಂಡದ ಸದಸ್ಯರು ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.






