Kalaburagi | ಹಿರಿಯ ನಾಗರಿಕರ ಸುರಕ್ಷತೆ, ಹಕ್ಕುಗಳ ರಕ್ಷಣೆಗೆ ಕಾನೂನು ವ್ಯವಸ್ಥೆ ಬದ್ಧ: ಶ್ರೀನಿವಾಸ ನವಲೆ

ಕಲಬುರಗಿ: ಹಿರಿಯ ನಾಗರಿಕರು ಹಾಗೂ ಪೋಷಕರ ಸುರಕ್ಷತೆ, ಹಕ್ಕುಗಳು ಮತ್ತು ಗೌರವಯುತ ಜೀವನದ ರಕ್ಷಣೆಗೆ ಕಾನೂನು ವ್ಯವಸ್ಥೆ ಸದಾ ಬದ್ಧವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.
ನಗರದ ಹೊಸ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರ ಹಕ್ಕುಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತು ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಅಗತ್ಯವಿದೆ. 2007ರ ‘ಪೋಷಕರ ಮತ್ತು ಹಿರಿಯ ನಾಗರಿಕರ ಪೋಷಣೆ ಹಾಗೂ ಕ್ಷೇಮಾಭಿವೃದ್ಧಿ ಕಾಯ್ದೆ’ ಅಡಿಯಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ತಂದೆ-ತಾಯಂದಿರಿಗೆ ಜೀವನಾಧಾರ ಮತ್ತು ಆಸ್ತಿ ರಕ್ಷಣೆಗೆ ಕಾನೂನುಬದ್ಧ ಅವಕಾಶಗಳಿವೆ ಎಂದು ವಿವರಿಸಿದರು.
ತಂದೆ-ತಾಯಿಯನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ. ಜೀವನಾಂಶ ನೀಡದೆ ಅಥವಾ ಪೋಷಕರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಸಂಬಂಧಿಸಿದಂತೆ ಹಿರಿಯ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಟ್ರಿಬ್ಯೂನಲ್‌ಗೆ ಅಧಿಕಾರ ನೀಡಲಾಗಿದೆ. ತಂದೆ-ತಾಯಂದಿರನ್ನು ನೋಡಿಕೊಳ್ಳುವ ಷರತ್ತಿನ ಮೇಲೆ ಮಕ್ಕಳಿಗೆ ಮಾಡಿಕೊಟ್ಟಿರುವ ಗಿಫ್ಟ್ ಡೀಡ್ (ದಾನಪತ್ರ) ಉಲ್ಲಂಘನೆಯಾದಲ್ಲಿ, ಅದನ್ನು ರದ್ದುಗೊಳಿಸಿ ಆಸ್ತಿಯನ್ನು ಹಿರಿಯ ನಾಗರಿಕರಿಗೆ ಮರಳಿಸುವ ಅಧಿಕಾರವೂ ಉಪವಿಭಾಗಾಧಿಕಾರಿಗಳ ನೇತೃತ್ವದ ಟ್ರಿಬ್ಯೂನಲ್‌ಗೆ ಇದೆ ಎಂದು ತಿಳಿಸಿದರು.
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕಲಬುರಗಿ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದು ಸಮಾಧಾನಕರ ಸಂಗತಿಯಾಗಿದೆ. ಹಿರಿಯ ನಾಗರಿಕರ ಸುರಕ್ಷತೆಗಾಗಿ ಪ್ರತಿ ಪೊಲೀಸ್ ಠಾಣೆಯಲ್ಲಿ ಹಿರಿಯ ನಾಗರಿಕರ ಪಟ್ಟಿಯನ್ನು ನಿರ್ವಹಿಸಿ, ಅಗತ್ಯ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.
ಹಿರಿಯ ನಾಗರಿಕರು ಕಾನೂನು ಸಮಸ್ಯೆ ಎದುರಿಸಿದಾಗ ಉಚಿತ ಕಾನೂನು ಸಲಹೆ ಹಾಗೂ ನೆರವು ಪಡೆಯಲು 15100 ಸಹಾಯವಾಣಿ ಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶ ಶ್ರೀನಿವಾಸ ನವಲೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 15 ಹಿರಿಯ ನಾಗರಿಕರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಸುಮಾರು 68 ಹಿರಿಯ ನಾಗರಿಕರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ಕ್ರಮವಾಗಿ 500 ರೂ., 300 ರೂ. ಹಾಗೂ 200 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಿರಿಯ ನಾಗರಿಕರ ಹಕ್ಕುಗಳು, ಕಾನೂನು ರಕ್ಷಣೆ ಹಾಗೂ ಅವರಿಗೆ ದೊರೆಯುವ ಸರ್ಕಾರದ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್ 1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಚರಿಸಲಾಗುತ್ತಿದೆ. 1991ರಲ್ಲಿ ಆರಂಭವಾದ ಈ ಆಚರಣೆಗೆ 35 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಹಿರಿಯ ನಾಗರಿಕರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಧನ-ಸಲಕರಣೆ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಅರ್ಹರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ನಾಗರಿಕರ ರಕ್ಷಣೆಗಾಗಿ ಕಾನೂನು ವ್ಯವಸ್ಥೆಯಲ್ಲಿ ವಿಶೇಷ ಕಾಯ್ದೆಗಳಿದ್ದು, ಯಾವುದೇ ಸಮಸ್ಯೆ ಎದುರಾದಾಗ ಕಾನೂನು ಮಾರ್ಗದ ಮೂಲಕ ಪರಿಹಾರ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿರಿಯ ನ್ಯಾಯವಾದಿ ರಾಜೆ ಶಿವಶರಣಪ್ಪ ಅವರು ಹಿರಿಯ ನಾಗರಿಕರ ಹಕ್ಕುಗಳು ಹಾಗೂ ಕಾನೂನು ರಕ್ಷಣೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಾತೋಶ್ರೀ ಅಂಬುಬಾಯಿ ಅಂಧ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಅರುಣಕುಮಾರ ಲೋಯಾ, ಶತಾಯುಷಿ ಸಂಗಮ್ಮ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ತಾಲೂಕುಗಳ ಎಂಆರ್‌ಡಬ್ಲ್ಯು, ವಿವಿಧ ಸಂಸ್ಥೆಗಳ ಮುಖ್ಯಸ್ಥರು ಹಾಗೂ ನೂರಾರು ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಉಪಸ್ಥಿತರಿದ್ದರು.






