Kalaburagi | ಯುವಕನ ಮೇಲೆ ಹಲ್ಲೆ ಖಂಡಿಸಿ ಕೋಲಿ-ಕಬ್ಬಲಿಗ ಸಮುದಾಯದ ಬೃಹತ್ ಪ್ರತಿಭಟನೆ

ಕಲಬುರಗಿ: ಅಫಜಲಪುರ ತಾಲೂಕಿನ ದೇವಲಗಾಣಗಾಪೂರ ಗ್ರಾಮದಲ್ಲಿ ಆಟೋ ಚಾಲಕರಾಗಿರುವ ದತ್ತು ಬರ್ಜಿ (ಮಾಗಣಗೇರಿ) ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಕೋಲಿ-ಕಬ್ಬಲಿಗ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಕಲಬುರಗಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕೊಲೆ, ಮಾರಣಾಂತಿಕ ಹಲ್ಲೆ, ಮಹಿಳೆಯರ ಮೇಲಿನ ದೌರ್ಜನ್ಯ, ಮಾದಕ ವಸ್ತುಗಳ ಹಾವಳಿ ಹಾಗೂ ಇತರ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವಲ್ಲಿ ಸಂಬoಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಜುಲೈ 24ರಂದು ದೇವಲಗಾಣಗಾಪೂರದಲ್ಲಿ ಆಟೋ ಚಾಲಕ ದತ್ತು ಬರ್ಜಿ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು, ಸಂತ್ರಸ್ತನ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಹಾಗೂ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಸಂಬoಧಪಟ್ಟ ಪೊಲೀಸ್ ಅಧಿಕಾರಿಯ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ದೇವಲಗಾಣಗಾಪೂರವು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವುದರಿಂದ ಅಲ್ಲಿನ ಗಾಂಜಾ, ಡ್ರಗ್ಸ್, ಜೂಜು ಹಾಗೂ ಇತರ ಅಕ್ರಮ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮನವಿಯಲ್ಲಿ ತಿಳಿಸಿದರು.
ಇದೇ ವೇಳೆ ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಲಕ್ಷ್ಮಣ ಕೇಲಕರ ಅವರಿಗೆ ವಿದ್ಯುತ್ ಅವಘಡದಿಂದ ಎರಡೂ ಕೈಗಳನ್ನು ಕಳೆದುಕೊಂಡಿದ್ದರೂ ಇದುವರೆಗೆ ಸಮರ್ಪಕ ಪರಿಹಾರ ದೊರೆತಿಲ್ಲ. ಅವರಿಗೆ ಕೂಡಲೇ ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ನೆರವು ನೀಡಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಅವ್ವಣ್ಣ ಮ್ಯಾಕೇರಿ, ಶರಣಪ್ಪ ತಳವಾರ, ಶಾಂತಪ್ಪ ಕೂಡಿ, ಬಸವರಾಜ ಸಪ್ಪಣಗೋಳ, ಬಸವರಾಜ ಬೂದಿಹಾಳ, ವಿದ್ಯಾಧರ ಮಂಗಳೂರ, ರಮೇಶ ನಾಟೀಕಾರ, ಮಲ್ಲಿಕಾರ್ಜುನ ಎಮ್ಮೆನೂರ, ಸೂರ್ಯಕಾಂತ ಔರಾದ, ರಮೇಶ ಜಮಾದಾರ, ರಾಕೇಶ ಜಮಾದಾರ, ಸಂತೋಷ ಕೋಲಿ, ಚಂದ್ರಕಾoತ ತಳವಾರ, ಪ್ರೇಮ್ ಕೋಲಿ, ಆನಂದ ಕದರಗಿ, ದೇವೇಂದ್ರ ಕೆ.ಚಿಗರಳ್ಳಿ, ಸಂತೋಷ ತಳವಾರ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಿದ್ದರು.






