ಕಲಬುರಗಿ | ಮತದಾನದ ಹಕ್ಕು ರಕ್ಷಣೆಗೆ ಅ.13ರಂದು ಬೃಹತ್ ಪ್ರತಿಭಟನೆ : ಕೆ. ನೀಲಾ

ಕಲಬುರಗಿ: ಮತದಾನದ ಹಕ್ಕು ರಕ್ಷಣೆ, ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 13ರಂದು ನಗರದಲ್ಲಿ "ಇಂಡಿಯಾ ಒಕ್ಕೂಟ"ದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿರಣ್ ದೇಶಮುಖ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಮೂಲಕ ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಕಲಬುರಗಿ ಜಿಲ್ಲೆಯಲ್ಲಿಯೇ 1,054 ನಮೂನೆ-7 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ದುರ್ಬಳಕೆಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ನಮೂನೆ-6ರ ಮೂಲಕ ಮತ್ತೆ ಮತದಾನದ ಹಕ್ಕು ಪಡೆಯಬಹುದು ಎಂಬುದು ಸಮಸ್ಯೆಗೆ ಸೂಕ್ತ ಪರಿಹಾರವಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ ಇಂತಹ ಕ್ರಮಗಳನ್ನು ತಕ್ಷಣ ಕೈಬಿಡಬೇಕು ಎಂದು ಕೆ. ನೀಲಾ ಒತ್ತಾಯಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿರಣ್ ದೇಶಮುಖ ಮಾತನಾಡಿ, ದಿಲ್ಲಿಯಲ್ಲಿ ಪ್ರತಿಭಟನಾಕಾರರು, ವಿದ್ಯಾರ್ಥಿಗಳು ಹಾಗೂ ಯುವಜನ ಸಂಘಟನೆಗಳ ಮುಖಂಡರನ್ನು ವಶಕ್ಕೆ ಪಡೆಯುವ ಮೂಲಕ ಹೋರಾಟವನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದರು. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ಶಾಂತಿಯುತವಾಗಿದ್ದರೂ, ದಿಲ್ಲಿಯಲ್ಲಿ ಪ್ರತಿಭಟನಾಕಾರರ ಮೇಲೆ ನಿರ್ಬಂಧ ಹೇರುತ್ತಿರುವುದು ಕೇಂದ್ರ ಸರಕಾರದ ದಮನಕಾರಿ ಧೋರಣೆಯನ್ನು ತೋರಿಸುತ್ತದೆ ಎಂದರು.
ಹೋರಾಟಗಾರ ಮಹೇಶ್ ಕುಮಾರ್ ರಾಠೋಡ್ ಮಾತನಾಡಿ, ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ಪ್ರಜಾಪ್ರಭುತ್ವ ನೀಡಿರುವ ಹಕ್ಕು. ಆದರೆ ದಿಲ್ಲಿಯಲ್ಲಿ ಪ್ರತಿಭಟನಾಕಾರರ ಸಂಚಾರಕ್ಕೆ ಅಡ್ಡಿಪಡಿಸಿ, ಬಂಧನದ ಭೀತಿ ಸೃಷ್ಟಿಸಲಾಗುತ್ತಿದೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಹೇಳಿದರು.
ಎಸ್‌ಐಆರ್ ರದ್ದು, ದೇಶದ್ರೋಹಿ ಜ್ಞಾನೇಶ್ ಕುಮಾರ್ ವಜಾ, ನಮೂನೆ-7ರ ದುರ್ಬಳಕೆಯ ತನಿಖೆ ಹಾಗೂ ಪ್ರತಿಭಟನಾಕಾರರ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಅ.13ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಇಂಡಿಯಾ ಒಕ್ಕೂಟದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಜಾಪ್ರಭುತ್ವಪರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಅಜಿತ್ ಕುಮಾರ್, ರಾಜಾ ಪಟೇಲ್, ಸಾಜಿದ್ ಅಹ್ಮದ್, ಶಿವಾನಂದ ಪಾಟೀಲ ಮರ್ತೂರ, ಸುಧಾಮ ಧನ್ನಿ ಉಪಸ್ಥಿತರಿದ್ದರು.






