ಕಲಬುರಗಿ| “ಅಕ್ಕ ಪಡೆ” ವಾಹನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಕಲಬುರಗಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಚಾಚುವ “ಅಕ್ಕ ಪಡೆ” ವಾಹನಕ್ಕೆ ಚಾಲನೆ ನೀಡಿದರು.
ಸಂಕಷ್ಟದಲ್ಲಿರುವ ದುರ್ಬಲ, ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ಜೊತೆಗೆ ದೌರ್ಜನ್ಯ, ಹಿಂಸೆ, ನಿರ್ಲಕ್ಷ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಚಾಚಲು ಪ್ರಸಕ್ತ 2025-26ನೇ ಸಾಲಿಗೆ ರಾಜ್ಯದಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೊಲೀಸ್ ಇಲಾಖಾ ಸಹಯೋಗದೊಂದಿಗೆ “ಅಕ್ಕ ಪಡೆ” ಕಾರ್ಯಕ್ರಮ ಜಾರಿಗೊಳಿಸಿದೆ. ಅದರಂತೆ ಕಲಬುರಗಿಯಲ್ಲಿಯೂ ಅಕ್ಕ ಪಡೆ” ವಾಹನಕ್ಕೆ ಚಾಲನೆ ನೀಡಲಾಗಿದೆ.
ಈ ವೇಳೆ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್ ಉಪಸ್ಥಿತರಿದ್ದರು.







