Kalaburagi | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 5 ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಮನವಿ
ಭೀಮಾ ನದಿಗೆ 2 ಟಿಎಂಸಿ ನೀರು ಹರಿಸಲು ಮಹಾರಾಷ್ಟ್ರದೊಂದಿಗೆ ಮಾತುಕತೆಗೆ ಆಗ್ರಹ

ಕಲಬುರಗಿ: ಕಲಬುರಗಿ ನಗರದಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತುರ್ತಾಗಿ 5 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಅವರು, ಈ ಕುರಿತು ಮನವಿ ಪತ್ರ ಸಲ್ಲಿಸಿದರು. ನಗರದ ಶೇ.80ರಷ್ಟು ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆಬಾವಿಗಳು ಬತ್ತಿಹೋಗಿವೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೇಸಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮರ್ಪಕವಾಗಿ ನೀರು ಪೂರೈಸಲು ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಬೆಳೆ ನಷ್ಟ ಸಂಭವಿಸಿದ್ದು, ಬೆಳೆ ವಿಮೆ ಕಂತು ಪಾವತಿಸಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ವಿಮೆಗೆ ನೋಂದಾಯಿಸಿಕೊಂಡಿರುವ ಅರ್ಹ ರೈತರಿಗೆ ತಕ್ಷಣ ಮಧ್ಯಂತರ ವಿಮೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಘೋಷಿಸಿರುವ ಕನಿಷ್ಠ 5,000 ರೂ. ಬರ ಪರಿಹಾರದ ಮೊದಲ ಕಂತಿನ 2,500 ರೂ. ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಈ ಹಣ ಎಲ್ಲ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆದಷ್ಟು ಬೇಗ ಜಮೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಉಳಿದ ಪರಿಹಾರ ಮೊತ್ತವನ್ನೂ ಶೀಘ್ರ ಬಿಡುಗಡೆ ಮಾಡಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕು ಎಂದು ಕೋರಿದ್ದಾರೆ.
ಭೀಮಾ ನದಿಗೆ 2 ಟಿಎಂಸಿ ನೀರು ಹರಿಸಲು ಒತ್ತಾಯ :
ಭೀಮಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರು ಬಿಡುಗಡೆ ಮಾಡದಿರುವ ಬಗ್ಗೆ ಶಾಸಕ ಅಲ್ಲಂಪ್ರಭು ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಜನಿ ಜಲಾಶಯದಲ್ಲಿ ಡೆಡ್ ಸ್ಟೋರೇಜ್ನಲ್ಲಿಯೇ ಸುಮಾರು 60 ಟಿಎಂಸಿ ನೀರಿನ ಸಂಗ್ರಹವಿದೆ ಎಂದು ಉಲ್ಲೇಖಿಸಿರುವ ಅವರು, ಪ್ರಸ್ತುತ ಬರ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಬೇಕು. ಕನಿಷ್ಠ 2 ಟಿಎಂಸಿ ನೀರನ್ನಾದರೂ ಭೀಮಾ ನದಿಗೆ ಹರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಇದರಿಂದ ಭೀಮಾ ನದಿ ತೀರದ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಜನರು ಮತ್ತು ಜಾನುವಾರುಗಳಿಗೆ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.






