Kalaburagi | ಬರ ಪರಿಹಾರ ಅನುದಾನ ಬಿಡುಗಡೆಗೆ ಆಗ್ರಹಿಸಿ ನ.11ರಂದು ಶಾಸಕ ಬಿ.ಆರ್.ಪಾಟೀಲ್ ಧರಣಿ

ಕಲಬುರಗಿ: ರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಬರ ಪರಿಹಾರದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರು ನಾಳೆ ನಗರದ ಮಹಾತ್ಮ ಗಾಂಧಿ ಪ್ರತಿಮೆ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿದ್ದು, ಸರ್ಕಾರವು 226 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಬರದಿಂದ ಸಂಕಷ್ಟಕ್ಕೀಡಾದ ರೈತರಿಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರವು ಕೇಂದ್ರಕ್ಕೆ 22,400 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದೆ. ಆದರೆ, ಕೇಂದ್ರ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಗಮನ ಸೆಳೆದು ರಾಜ್ಯದ ರೈತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಧರಣಿ ನಡೆಸಲಾಗುತ್ತಿದೆ. ಈ ಹೋರಾಟದಲ್ಲಿ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಬಿ.ಆರ್. ಪಾಟೀಲ್ ಮನವಿ ಮಾಡಿದ್ದಾರೆ.
Next Story




