ಕಲಬುರಗಿ | ಹಸುರಗುಂಡಗಿ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಶಾಸಕ ಎಂ.ವೈ. ಪಾಟೀಲ್‌ಗೆ ಮನವಿ

ಕಲಬುರಗಿ: ಅಫಜಲಪೂರ ತಾಲೂಕಿನ ಹಸುರಗುಂಡಗಿ ಗ್ರಾಮದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಮೂಲಭೂತ ಅಗತ್ಯಗಳ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಡಾ. ಬಾಬು ಜಗಜೀವನರಾಂ ತರುಣ ಸಂಘದ ಅಧ್ಯಕ್ಷ ರಾಜು ಎಸ್. ಕಟ್ಟಿಮನಿ ಅವರು ಅಫಜಲಪೂರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮದ ಜನಜೀವನಕ್ಕೆ ನೇರವಾಗಿ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಮನವಿಯಲ್ಲಿ ಪ್ರಸ್ತಾಪಿಸಿರುವ ಅವರು, ಮಹಿಳೆಯರಿಗೆ ಸಾರ್ವಜನಿಕ ಶೌಚಾಲಯದ ಕೊರತೆಯಿಂದ ತೀವ್ರ ತೊಂದರೆ ಉಂಟಾಗುತ್ತಿದ್ದು, ಶೀಘ್ರದಲ್ಲೇ ಸುಸಜ್ಜಿತ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರತಿ ಶುಕ್ರವಾರ ನಡೆಯುವ ವಾರದ ಸಂತೆಗಾಗಿ ಪ್ರತ್ಯೇಕ ಹಾಗೂ ವಿಶಾಲ ಜಾಗವನ್ನು ಮೀಸಲಿಡುವ ಮೂಲಕ ಸಂಚಾರ ದಟ್ಟಣೆ ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು ಎಂದು ಮನವಿ ಮಾಡಿದ್ದಾರೆ.
ಗ್ರಾಮದ ಆಂತರಿಕ ರಸ್ತೆಗಳು ಹದಗೆಟ್ಟಿದ್ದು, ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯಿಂದ ಕೊಳಚೆ ನೀರು ರಸ್ತೆಗಳಲ್ಲಿ ಹರಿಯುತ್ತಿರುವುದರಿಂದ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಹಸುರಗುಂಡಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿಂದ ಗ್ರಾಮಸ್ಥರಿಗೆ ಸಮರ್ಪಕ ಆರೋಗ್ಯ ಸೇವೆ ದೊರೆಯುತ್ತಿಲ್ಲ. ಹೀಗಾಗಿ ಪ್ರತಿದಿನ ವೈದ್ಯರ ಹಾಜರಾತಿ ಖಚಿತಪಡಿಸುವುದರ ಜೊತೆಗೆ ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ತಿಳಿಸಿದ್ದಾರೆ.
ಗ್ರಾಮದ ಪ್ರಮುಖ ಓಣಿಗಳಲ್ಲಿ ಹೈಮಾಸ್ಟ್ ದೀಪಗಳನ್ನು ಅಳವಡಿಸಿ ಸಾರ್ವಜನಿಕರ ಭದ್ರತೆ ಹಾಗೂ ರಾತ್ರಿ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಜೊತೆಗೆ ಮಾದಿಗರ ಓಣಿಯಲ್ಲಿರುವ ಕುಡಿಯುವ ನೀರಿನ ತೆರೆದ ಬಾವಿಯನ್ನು ದುರಸ್ತಿಗೊಳಿಸಿ ಸಾರ್ವಜನಿಕ ಬಳಕೆಗೆ ಯೋಗ್ಯವಾಗಿಸಬೇಕೆಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಚಂದಪ್ಪ ಕಟ್ಟಿಮನಿ, ರಾಜು ಕಟ್ಟಿಮನಿ, ಸಾಗರ ಕಟ್ಟಿಮನಿ, ಶಿವರಾಜಕುಮಾರ, ಸಾಗರ್ ಬಿಟಿ, ಸಾಜನಕುಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.






