ಕಲಬುರಗಿ | ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಕಲಬುರಗಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಜೇವರ್ಗಿ ತಾಲ್ಲೂಕಿನ ಮಾರಡಗಿ ಎಸ್ಸೆ ಗ್ರಾಮದಲ್ಲಿ ನಡೆದಿದೆ.
ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಮಕ್ಕಳಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಒಟ್ಟು 117 ವಿದ್ಯಾರ್ಥಿಗಳಲ್ಲಿ 68 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ್ದಾರೆ. ಅದರಲ್ಲಿ 22 ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲಾ ಮಕ್ಕಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮಧ್ಯಾಹ್ನದ ಉಪಹಾರ ಸೇವಿಸಿದ ನಂತರ ಈ ರೀತಿಯ ಘಟನೆ ನಡೆದಿದ್ದು, ಕಳಪೆ ಗುಣಮಟ್ಟದ ತೊಗರಿ ಬೇಳೆಯ ಬಳಕೆಯಿಂದ ಈ ಘಟನೆ ನಡೆದಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ತಾಲ್ಲೂಕು ವೈದ್ಯಾಧಿಕಾರಿ ಡಾ.ಉಮೇಶ್ ಶರ್ಮಾ, ಪಿಎಸ್ಐ ಗಜಾನನ ಬಿರಾದಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಸೇರಿದಂತೆ ತಾಲೂಕಿನ ವಿವಿಧ ರಾಜಕೀಯ ಮುಖಂಡರು, ಹೋರಾಟಗಾರರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.





