Kalaburagi | ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್

ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಸೆಪ್ಟೆಂಬರ್ 19, 2026ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಜಿಲ್ಲೆಯ ಕಕ್ಷಿದಾರರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಲಬುರಗಿ ಹಾಗೂ ಜಿಲ್ಲೆಯ ವಿವಿಧ ತಾಲೂಕು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ, ರಾಜೀ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಸಮಯ ಮತ್ತು ಹಣ ಉಳಿತಾಯವಾಗಲಿದೆ. ಸೌಹಾರ್ದಯುತವಾಗಿ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಉತ್ತಮ ಬಾಂಧವ್ಯ ಹಾಗೂ ನೆಮ್ಮದಿ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತಿಳಿಸಿದೆ.
ಯಾವ ಪ್ರಕರಣಗಳನ್ನು ಇತ್ಯರ್ಥಪಡಿಸಬಹುದು? :
ಲೋಕ ಅದಾಲತ್‌ನಲ್ಲಿ ಪೆಂಡಿಂಗ್ ಸಿವಿಲ್ ವ್ಯಾಜ್ಯಗಳು, ರಾಜೀ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಿ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಕಾರ್ಮಿಕ ವ್ಯಾಜ್ಯಗಳು, ಕೌಟುಂಬಿಕ ನ್ಯಾಯಾಲಯದ ಕೆಲವು ಪ್ರಕರಣಗಳು ಹಾಗೂ ಅಮಲ್‌ಜಾರಿ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಲೋಕ ಅದಾಲತ್‌ನಲ್ಲಿ ಉಭಯ ಪಕ್ಷಗಾರರಿಗೆ ರಾಜೀ ಸಂಧಾನ ಮಾಡಿಕೊಳ್ಳಲು ನ್ಯಾಯಾಲಯಗಳಿಂದ ಮಾರ್ಗದರ್ಶನ ನೀಡಲಾಗುತ್ತದೆ. ಲೋಕ ಅದಾಲತ್‌ನಲ್ಲಿ ಹೊರಡಿಸುವ ಅವಾರ್ಡ್ ನ್ಯಾಯಾಲಯದ ತೀರ್ಪಿನಷ್ಟೇ ಪರಿಣಾಮಕಾರಿಯಾಗಿದ್ದು, ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಕಕ್ಷಿದಾರರು ವಕೀಲರ ಮೂಲಕ ಅಥವಾ ನೇರವಾಗಿ ಲೋಕ ಅದಾಲತ್‌ನಲ್ಲಿ ಭಾಗವಹಿಸಬಹುದು. ಬೇರೆ ಪ್ರದೇಶದಲ್ಲಿರುವವರು ಆನ್‌ಲೈನ್ ಮೂಲಕವೂ ಭಾಗವಹಿಸಲು ಅವಕಾಶವಿದೆ.
ನ್ಯಾಯಾಲಯದ ಶುಲ್ಕ ಮರುಪಾವತಿ :
ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯಲ್ಲಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾದಲ್ಲಿ ನ್ಯಾಯಾಲಯಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುತ್ತದೆ. ಇಂತಹ ಪ್ರಕರಣಗಳಿಗೆ ಮೇಲ್ಮನವಿಯ ಅವಕಾಶ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯನ್ನು 08472-253370 ಸಂಪರ್ಕಿಸಬಹುದು. ಜಿಲ್ಲೆಯ ಯಾವುದೇ ತಾಲೂಕು ಕಾನೂನು ಸೇವಾ ಸಮಿತಿಯನ್ನೂ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.






