Kalaburagi | ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
‘ಏಕ್ ಗಂಟಾ, ಖೇಲ್ ಮೈದಾನ್ ಮೇ’ ಘೋಷಣೆಯಂತೆ ಪ್ರತಿದಿನ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಅಮೃತ ಅಷ್ಟಗಿ

ಕಲಬುರಗಿ: ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಪ್ರತಿಯೊಬ್ಬರೂ ಪ್ರತಿದಿನ ಕನಿಷ್ಠ ಒಂದು ಗಂಟೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ ಹೇಳಿದರು.
ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮಕ್ಕೆ ಹಾಕಿ ದಂತಕಥೆ ಮೇಜರ್ ಧ್ಯಾನ್‌ಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಜಿಲ್ಲೆಯ ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಕೇಂದ್ರ ಸರ್ಕಾರದ ‘ಏಕ್ ಗಂಟಾ, ಖೇಲ್ ಮೈದಾನ್ ಮೇ’ ಘೋಷಣೆಯಂತೆ ಪ್ರತಿಯೊಬ್ಬರೂ ಪ್ರತಿದಿನ ಕನಿಷ್ಠ ಒಂದು ಗಂಟೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುವುದರ ಜೊತೆಗೆ ಕ್ರೀಡಾ ಪ್ರತಿಭೆಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ ಎಂದು ಹೇಳಿದರು.
ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಾಲಾ ಮಕ್ಕಳು, ಪುರುಷರು, ಮಹಿಳೆಯರು ಹಾಗೂ ಅಥ್ಲೆಟಿಕ್ಸ್ ಕ್ರೀಡಾಪಟುಗಳಿಗಾಗಿ 100 ಮೀಟರ್, 200 ಮೀಟರ್ ಮತ್ತು 1600 ಮೀಟರ್ ಓಟದ ಸ್ಪರ್ಧೆಗಳು ನಡೆದವು. ಶಾಲಾ ಬಾಲಕರಿಗಾಗಿ ಹಾಕಿ ಸ್ಪರ್ಧೆಯನ್ನೂ ಆಯೋಜಿಸಲಾಗಿತ್ತು.
ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಇಲಾಖೆಯ ತರಬೇತಿದಾರರಾದ ಸಂಜಯ್ ಬಾಣದ, ರಾಜು ಚವ್ಹಾಣ, ಪ್ರವೀಣ್ ಪುಣೆ, ರಾಜು, ಸಂತೋಷ್ ಬಾವಿಮನಿ, ಸ್ಟೀಫನ್, ಶ್ರೀರಾಜ್ ಸೇರಿದಂತೆ ಇಲಾಖೆಯ ಸಿಬ್ಬಂದಿ, ಕ್ರೀಡಾಪಟುಗಳು ಹಾಗೂ ಹಿರಿಯ ನಾಗರಿಕರು ಭಾಗವಹಿಸಿದ್ದರು.






