ಕಲಬುರಗಿ| ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಶಿಕ್ಷಕರಿಂದ ಉತ್ಸಾಹಭರಿತ ಮತದಾನ

ಕಲಬುರಗಿ: ವಿಧಾನ ಪರಿಷತ್ ಪ್ರವೇಶಕ್ಕಾಗಿ ನಡೆಯುತ್ತಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರು ಶುಕ್ರವಾರ ಬೆಳಗ್ಗೆಯಿಂದಲೇ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಶುಕ್ರವಾರ ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ನಗರದ ವಿವಿಧ ಮತಗಟ್ಟೆಗಳಲ್ಲಿ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ನಗರದ ಎನ್.ವಿ. ಶಾಲೆ, ಐಟಿಐ ಕಾಲೇಜು, ಎಂ.ಪಿ.ಎಚ್.ಎಸ್. ಹಾಗೂ ನಗರೇಶ್ವರ ಶಾಲೆ ಸೇರಿದಂತೆ ವಿವಿಧ ಮತಗಟ್ಟೆಗಳಲ್ಲಿ ಬೆಳಗ್ಗೆಯಿಂದಲೇ ಮತದಾನ ಚಟುವಟಿಕೆಗಳು ಗರಿಗೆದರಿದ್ದವು. ಶಿಕ್ಷಕರು ಅಗತ್ಯ ಗುರುತಿನ ಚೀಟಿಗಳನ್ನು ಹಾಜರುಪಡಿಸಿ ಮತದಾನದಲ್ಲಿ ಭಾಗವಹಿಸಿದರು. ಇದೇ ವೇಳೆ, ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಶಿಕ್ಷಕರು ವಿಶೇಷ ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿ ಗಮನ ಸೆಳೆದರು.
ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಹಾಗೂ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ನಮೋಶಿ ಸೇರಿದಂತೆ ಇತರ ಅಭ್ಯರ್ಥಿಗಳು ಮತಗಟ್ಟೆಗಳ ಹೊರಭಾಗದಲ್ಲಿರುವ ಕೇಂದ್ರಗಳಿಗೆ ಭೇಟಿ ನೀಡಿ ಚುನಾವಣಾ ಪ್ರಕ್ರಿಯೆಯ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಒಟ್ಟು 40 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 5,672 ಪುರುಷರು ಹಾಗೂ 4,980 ಮಹಿಳೆಯರು ಸೇರಿದಂತೆ ಒಟ್ಟು 10,652 ಮತದಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.
ಶುಕ್ರವಾರ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.






