Kalaburagi | ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಮೃತ್ಯು

ಕಲಬುರಗಿ: ನಗರದ ರಾಜಾಪುರ ರಸ್ತೆಯಲ್ಲಿರುವ ಬಾಬು ಜಗಜೀವನ ರಾಮ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಚಿತ್ತಾಪುರ ತಾಲೂಕಿನ ಕುಂದನೂರು ಗ್ರಾಮದ ನಿವಾಸಿ ಮುಜಾಹೀದ್ ಪಟೇಲ್ (25) ಎಂದು ಗುರುತಿಸಲಾಗಿದೆ. ಅವರು ನಗರದ ಕಾಲೇಜೊಂದರಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದ ಮುಜಾಹೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮೃತ ವಿದ್ಯಾರ್ಥಿಯ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಡಿಸಿಪಿ ಶಾಲೂ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದೇ ವಸತಿ ನಿಲಯದ ಸಮೀಪದಲ್ಲಿರುವ ಅಂಬೇಡ್ಕರ್ ವಸತಿ ನಿಲಯದಲ್ಲಿ ಮೊನ್ನೆಯಷ್ಟೇ ವಿದ್ಯಾರ್ಥಿಯೊಬ್ಬನನ್ನು ಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಮತ್ತೊಂದು ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬನ ಅನುಮಾನಾಸ್ಪದ ಸಾವು ಸಂಭವಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.






