Kalaburagi | ಸೇವಾಭದ್ರತೆ, ಕನಿಷ್ಠ ವೇತನಕ್ಕೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ

ಕಲಬುರಗಿ : ಸೇವಾಭದ್ರತೆ, ಕನಿಷ್ಠ ವೇತನ, ವಾರದ ರಜೆ, ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಅನಿರ್ದಿಷ್ಟ ಧರಣಿ ಆರಂಭಿಸಿದರು.
ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೌಕರರು ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಹಲವು ವರ್ಷಗಳಿಂದ ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೂ ಹೊರಗುತ್ತಿಗೆ ನೌಕರರಿಗೆ ಸೇವಾಭದ್ರತೆ ಇಲ್ಲ. ಸರ್ಕಾರ ಕೂಡಲೇ ಕನಿಷ್ಠ ವೇತನ ಜಾರಿಗೊಳಿಸಿ, ವಾರಕ್ಕೆ ಒಂದು ದಿನ ಕಡ್ಡಾಯ ರಜೆ, ಬಾಕಿ ವೇತನ ಪಾವತಿ ಹಾಗೂ ಉದ್ಯೋಗ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಹೊರಗುತ್ತಿಗೆ ನೌಕರರು ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದರೂ ಅವರ ಸಮಸ್ಯೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ನ್ಯಾಯಸಮ್ಮತ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಧರಣಿಯಲ್ಲಿ ಭಾಗವಹಿಸಿದ್ದ ನೌಕರರು, ಹಲವು ವರ್ಷಗಳಿಂದ ಕಡಿಮೆ ವೇತನದಲ್ಲಿ ದುಡಿಯುತ್ತಿದ್ದರೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು, ಜೀವನ ನಿರ್ವಹಣೆ ದುಸ್ತರವಾಗಿದೆ. ಸರ್ಕಾರ ಮಾನವೀಯ ದೃಷ್ಟಿಯಿಂದ ಸಮಸ್ಯೆಗಳಿಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪರಶುರಾಮ ಹಾಡಲಗಿ, ಮೇಘರಾಜ ಕಟಾರೆ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ನೌಕರರು ಭಾಗವಹಿಸಿದ್ದರು.






