Kalaburagi | ವಿಶ್ವಕರ್ಮ ಸಮಾಜಕ್ಕೆ 1.4 ಕೋಟಿ ರೂ. ಮೌಲ್ಯದ ನಿವೇಶನ ಮಂಜೂರು : ಸಚಿವ ಪ್ರಿಯಾಂಕ್ ಖರ್ಗೆಗೆ ಅಭಿನಂದನೆ

ಕಲಬುರಗಿ: ಜಿಲ್ಲಾ ಕೇಂದ್ರದಲ್ಲಿ ವಿಶ್ವಕರ್ಮ ಸಮಾಜದ ಸಮುದಾಯ ಭವನ ನಿರ್ಮಾಣ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ನಾಗರಿಕ ಸೌಲಭ್ಯ ನಿವೇಶನ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವಕರ್ಮ ಮಹಾ ಒಕ್ಕೂಟ ಹಾಗೂ ಕಲಬುರಗಿ ಜಿಲ್ಲಾ ವಿಶ್ವಕರ್ಮ ಸಮಾಜದ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ಕೃತಜ್ಞತೆ ವ್ಯಕ್ತಪಡಿಸಿವೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ವಿಶ್ವಕರ್ಮ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ವಿಜಯಕುಮಾರ ಪತ್ತಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆಗೊಂಡ ಕೋಟನೂರ-ಡಿ ಗ್ರಾಮದ ಸರ್ವೇ ನಂ. 61/4ರಲ್ಲಿ 1,344.22 ಚದರ ಮೀಟರ್ ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಸಮಾಜಕ್ಕೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ನಿವೇಶನದ ಹಂಚಿಕೆ ಮೌಲ್ಯದ ಶೇ.10ರ ದರವನ್ನು ನಿಗದಿಪಡಿಸಲಾಗಿದ್ದು, ಜೂನ್ 20ರಂದು ರಾಜ್ಯ ಸಚಿವ ಸಂಪುಟ ಈ ಹಂಚಿಕೆಗೆ ಅನುಮೋದನೆ ನೀಡಿದೆ ಎಂದು ಹೇಳಿದರು.
ಸುಮಾರು ಎಂಟು ತಿಂಗಳ ಹಿಂದೆ ಕಲಬುರಗಿಯಲ್ಲಿ ನಡೆದ ವಿಶ್ವಕರ್ಮ ಮಹಾ ಒಕ್ಕೂಟದ ಜಿಲ್ಲಾ ಘಟಕದ ಪದಗ್ರಹಣ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅಂದಿನ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಉಚಿತ ನಿವೇಶನಕ್ಕಾಗಿ ಮನವಿ ಸಲ್ಲಿಸಲಾಗಿತ್ತು. ಆ ಮನವಿಗೆ ಸ್ಪಂದಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಮುತುವರ್ಜಿಯಿಂದ ಸುಮಾರು 1.4 ಕೋಟಿ ರೂ. ಮೌಲ್ಯದ ನಿವೇಶನ ಮಂಜೂರಾಗಿರುವುದು ಸಮಾಜಕ್ಕೆ ಸಂತಸ ತಂದಿದೆ ಎಂದು ವಿಜಯಕುಮಾರ ಪತ್ತಾರ ಹೇಳಿದರು.
ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಭೈರತಿ ಸುರೇಶ್ ಹಾಗೂ ರಾಜ್ಯ ಸರ್ಕಾರಕ್ಕೆ ವಿಶ್ವಕರ್ಮ ಸಮಾಜದ ಪರವಾಗಿ ಹೃತ್ಪೂರ್ವಕ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸಿದರು.
ರಾಜ್ಯದ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವಿಶ್ವಕರ್ಮ ಸಮಾಜಕ್ಕೆ ಇನ್ನಷ್ಟು ಪ್ರೋತ್ಸಾಹ ಮತ್ತು ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಕಲಬುರಗಿಯ ಮಾದರಿಯಲ್ಲಿ ಇತರೆ ಜಿಲ್ಲೆಗಳಲ್ಲಿಯೂ ಸಮುದಾಯ ಭವನ, ವಿದ್ಯಾರ್ಥಿ ನಿಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಶೀಘ್ರದಲ್ಲೇ ಸಮಗ್ರ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಶ್ವಕರ್ಮ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಪತ್ತಾರ, ವಿಶ್ವಕರ್ಮ ಒಕ್ಕೂಟದ ಕಲಬುರಗಿ ಜಿಲ್ಲಾಧ್ಯಕ್ಷರಾದ ಮಾರುತಿ ಕಮ್ಮಾರ, ಪ್ರಾಣೇಶ ವಿವಿಶ್ವಕರ್ಮ ಗಂಗಾಧರ, ಸೇರಿದಂತೆ ಜಿಲ್ಲಾ ವಿಶ್ವಕರ್ಮ ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.






