Kalaburagi | ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಖಂಡನೀಯ: ಕೆ.ನೀಲಾ

ಕೆ.ನೀಲಾ
ಕಲಬುರಗಿ: ನವದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿ ಸಂಘಟನೆಗಳ ಬೆಂಬಲದೊಂದಿಗೆ ನಡೆದ ‘ಸಂಸತ್ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಾವಿರಾರು ವಿದ್ಯಾರ್ಥಿಗಳು ಹಾಗೂ ಯುವಜನರನ್ನು ಸಿಪಿಐ(ಎಂ) ಪೊಲಿಟ್ಬ್ಯುರೊ ಅಭಿನಂದಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಕಡೆಗಣಿಸಿರುವುದು ಅದರ ಸರ್ವಾಧಿಕಾರಿ ಧೋರಣೆಯನ್ನು ಬಯಲಿಗೆಳೆದಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಅವರು, ಜಂತರ್ ಮಂತರ್ ಹಾಗೂ ಅದರ ಸುತ್ತಮುತ್ತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ನಡೆಸಿರುವುದನ್ನು ಪಕ್ಷ ತೀವ್ರವಾಗಿ ಖಂಡಿಸಿದೆ ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ನಡೆದ ಪೊಲೀಸ್ ಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ಗಾಯಗೊಂಡಿದ್ದು, ಗೋಲ್ ಮಾರ್ಕೆಟ್ನಲ್ಲಿರುವ ಸಿಪಿಐ(ಎಂ) ಕೇಂದ್ರ ಕಚೇರಿ ಮುಂಭಾಗದಲ್ಲಿಯೂ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆಗಾರರನ್ನು ಪತ್ತೆಹಚ್ಚಬೇಕು ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯನ್ನು ವಿಸರ್ಜಿಸಬೇಕು ಎಂಬ ಬೇಡಿಕೆಗಳೊಂದಿಗೆ ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ನಡೆದ ಪ್ರತಿಭಟನೆಗಳು ಹಾಗೂ ನ್ಯಾಯಸಮ್ಮತ ಬೇಡಿಕೆಗಳನ್ನು ಬಿಜೆಪಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಟೀಕಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿನ ಅವ್ಯವಸ್ಥೆ ಮತ್ತು ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಪ್ರತಿಭಟನಾಕಾರರೊಂದಿಗೆ ಸಂವಾದಕ್ಕೂ ಸರ್ಕಾರ ಮುಂದಾಗದಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಕೂಡಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕು, ಎನ್ಟಿಎಯನ್ನು ವಿಸರ್ಜಿಸಬೇಕು ಹಾಗೂ ಪ್ರತಿಭಟನೆಯ ವೇಳೆ ಬಂಧಿಸಲಾದ ಎಲ್ಲ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಯಾವುದೇ ಷರತ್ತುಗಳಿಲ್ಲದೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಕೆ. ನೀಲಾ ಆಗ್ರಹಿಸಿದ್ದಾರೆ.






