Kalaburagi | ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ನೇಮಕಕ್ಕೆ ಅರ್ಹ, ಸಮರ್ಥ ಕಾರ್ಯಕರ್ತರಿಗೆ ಆದ್ಯತೆ: ಅರವಿಂದ ಅರಳಿ

ಕಲಬುರಗಿ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಸಂಘಟನಾ ಸೃಜನಾ ಅಭಿಯಾನ-2’ರಡಿ ಜಿಲ್ಲೆಯ 18 ಬ್ಲಾಕ್ಗಳಿಗೆ ಅರ್ಹ ಹಾಗೂ ಸಮರ್ಥ ಅಧ್ಯಕ್ಷರನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆಶಯದಂತೆ ದೇಶಾದ್ಯಂತ ನಿಷ್ಪಕ್ಷಪಾತವಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದೇ ಮಾದರಿಯಲ್ಲಿ ಬ್ಲಾಕ್ ಮಟ್ಟದಲ್ಲಿಯೂ ಸಮರ್ಥ ಸಂಘಟಕರನ್ನು ಗುರುತಿಸಿ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಬಿ.ಕೆ. ಹರಿಪ್ರಸಾದ್ ಅವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ 18 ಬ್ಲಾಕ್ಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಉದ್ದೇಶವಿದ್ದು, ಪ್ರತಿ ಬ್ಲಾಕ್ನಿಂದ ಮೂವರು ಆಕಾಂಕ್ಷಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗುತ್ತದೆ. ಪಕ್ಷದ ಸಂಘಟನಾ ಸಾಮರ್ಥ್ಯ, ಕಾರ್ಯಕರ್ತರೊಂದಿಗೆ ಹೊಂದಿರುವ ಸಂಪರ್ಕ ಹಾಗೂ ಪಕ್ಷದ ಬೆಳವಣಿಗೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.
ಪ್ರತಿ 10 ಬೂತ್ಗಳಿಗೆ ಒಬ್ಬ ಅಧ್ಯಕ್ಷರನ್ನು ನೇಮಿಸುವುದು ಸೇರಿದಂತೆ ಬೂತ್, ಬ್ಲಾಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಯೋಜನೆ ರೂಪಿಸಲಾಗಿದೆ. ಬ್ಲಾಕ್ ಮಟ್ಟದಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿಗೆ ಪದಾಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆಯೂ ನಡೆಯಲಿದೆ. ಕಾಂಗ್ರೆಸ್ ಸದಸ್ಯರಾಗಿರುವ ಆಸಕ್ತರು ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಪಕ್ಷವನ್ನು ಸಜ್ಜುಗೊಳಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.
ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮಾತನಾಡಿ, ಸಂಘಟನಾ ಸೃಜನಾ ಅಭಿಯಾನದ ಮೂಲಕ ದೇಶಾದ್ಯಂತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಐದು ವರ್ಷಗಳ ಅವಧಿ ಪೂರ್ಣಗೊಳಿಸಿದವರನ್ನೇ ಮತ್ತೆ ನೇಮಕ ಮಾಡಬಾರದು ಎಂಬ ಉದ್ದೇಶದಿಂದ ಹೊಸ ಮಾರ್ಗಸೂಚಿಗಳೊಂದಿಗೆ ಈ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ನೇಮಕಾತಿ ಪ್ರಕ್ರಿಯೆಯಲ್ಲಿ ಪಕ್ಷದ ಶಾಸಕರು ಅಥವಾ ಸಚಿವರ ಮನೆಗಳಲ್ಲಿ ಸಭೆ ನಡೆಸಬಾರದು ಎಂಬ ಮಾರ್ಗಸೂಚಿ ನೀಡಲಾಗಿದೆ. ಅಕ್ಟೋಬರ್ 31ರೊಳಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಕೆಪಿಸಿಸಿಗೆ ವರದಿ ಸಲ್ಲಿಸಲಾಗುವುದು. ವೀಕ್ಷಕರಾಗಿ ನೇಮಕಗೊಂಡಿರುವ ನಮಗೆ ಮೂರರಿಂದ ಆರು ಜನರ ಹೆಸರುಗಳನ್ನು ಶಿಫಾರಸು ಮಾಡುವ ಜವಾಬ್ದಾರಿ ನೀಡಲಾಗಿದೆ ಎಂದರು.
ಜಾತಿ, ಧರ್ಮದ ಭೇದಭಾವವಿಲ್ಲದೆ ಎಲ್ಲ ವರ್ಗಗಳಿಗೂ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಉತ್ತಮ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ಸಮಿತಿಯಲ್ಲಿ ಶಾಸಕರ ಕುಟುಂಬಸ್ಥರಿಗೆ ಅವಕಾಶ ನೀಡುವುದಿಲ್ಲ. ಸಕ್ರಿಯ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿರಣ್ ದೇಶಮುಖ ಮಾತನಾಡಿ, ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಈಗಾಗಲೇ ಆಕಾಂಕ್ಷಿಗಳ ಹೆಸರುಗಳು ಚರ್ಚೆಗೆ ಬರುತ್ತಿವೆ. ಪಕ್ಷದ ಪರವಾಗಿ ಪ್ರಾಮಾಣಿಕವಾಗಿ ದುಡಿದಿರುವ ಹಾಗೂ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಸಮರ್ಥ ಕಾರ್ಯಕರ್ತರನ್ನು ಗುರುತಿಸಿ ಶಿಫಾರಸು ಮಾಡಲು ಸಮಿತಿ ಮುಂದಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಕ್ಕಮಹಾದೇವಿ ಪಾಟೀಲ್ ಉಪಸ್ಥಿತರಿದ್ದರು.






