Kalaburagi | ಕಾಲೇಜು ಮೇಲ್ಛಾವಣಿ ಕುಸಿತ ಖಂಡಿಸಿ ಪ್ರತಿಭಟನೆ : ನೂತನ ಕಟ್ಟಡ ನಿರ್ಮಾಣಕ್ಕೆ ಎಐಡಿಎಸ್ಓ ಆಗ್ರಹ

ಕಲಬುರಗಿ : ನಗರದ ಏಕೈಕ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸಂಭವಿಸಿದ ಮೇಲ್ಛಾವಣಿ ಕುಸಿತದ ಘಟನೆಯನ್ನು ಖಂಡಿಸಿ, ಗಾಯಗೊಂಡ ವಿದ್ಯಾರ್ಥಿನಿಯರಿಗೆ ತಕ್ಷಣ ಪರಿಹಾರ ನೀಡಬೇಕು ಹಾಗೂ ಕಾಲೇಜಿಗೆ ನೂತನ ಕಟ್ಟಡ ನಿರ್ಮಿಸಬೇಕು ಎಂದು ಎಐಡಿಎಸ್ಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್) ಸಂಘಟನೆ ಆಗ್ರಹಿಸಿದೆ.
ಈ ಸಂಬಂಧ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷ ತುಳಜಾರಾಮ ಎನ್.ಕೆ., ಜಿಲ್ಲೆಯ ವಿವಿಧ ಗ್ರಾಮೀಣ ಭಾಗಗಳಿಂದ ಬರುವ ಬಡ ರೈತರು ಹಾಗೂ ಕಾರ್ಮಿಕ ಕುಟುಂಬಗಳ ಸಾವಿರಾರು ವಿದ್ಯಾರ್ಥಿನಿಯರು ಉನ್ನತ ಶಿಕ್ಷಣಕ್ಕಾಗಿ ಈ ಕಾಲೇಜನ್ನೇ ಅವಲಂಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ತರಗತಿ ನಡೆಯುತ್ತಿದ್ದ ವೇಳೆ ಮೇಲ್ಛಾವಣಿಯ ಸಿಮೆಂಟ್ ಪದರು ಕುಸಿದು ವಿದ್ಯಾರ್ಥಿನಿಯರು ಗಾಯಗೊಂಡಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಘಟನೆಯ ನಂತರ ವಿದ್ಯಾರ್ಥಿನಿಯರು ಹಾಗೂ ಪೋಷಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಜೀವಭಯದಲ್ಲೇ ಕಾಲೇಜಿಗೆ ಹಾಜರಾಗುವ ಪರಿಸ್ಥಿತಿ ಎದುರಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯರಿಗೆ ಸರ್ಕಾರ ತಕ್ಷಣ ಪರಿಹಾರ ಮಂಜೂರು ಮಾಡಬೇಕು. ಜೊತೆಗೆ ಶಿಥಿಲಗೊಂಡಿರುವ ಕಾಲೇಜು ಕಟ್ಟಡವನ್ನು ತುರ್ತಾಗಿ ದುರಸ್ತಿಗೊಳಿಸಿ, ವಿದ್ಯಾರ್ಥಿನಿಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಅನೇಕ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಕಟ್ಟಡಗಳ ಸ್ಥಿತಿಯೂ ಇದೇ ರೀತಿಯಲ್ಲಿದ್ದು, ಮಳೆಗಾಲದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕದಲ್ಲಿದ್ದಾರೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಅಗತ್ಯ ಆದ್ಯತೆ ನೀಡುತ್ತಿಲ್ಲ ಎಂಬುದು ಈ ಘಟನೆಯಿಂದ ಸ್ಪಷ್ಟವಾಗಿದೆ ಎಂದು ಆರೋಪಿಸಿದರು.
ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕಾಲೇಜಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಹಾಗೂ ವಿದ್ಯಾರ್ಥಿನಿಯರ ಸುರಕ್ಷತೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವಿದ್ಯಾರ್ಥಿನಿಯರ ಹಿತರಕ್ಷಣೆಗಾಗಿ ಜಿಲ್ಲಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ, ಖಜಾಂಚಿ ಸ್ಫೂರ್ತಿ ಗುರಜಲ್ಕರ್, ಸದಸ್ಯರಾದ ದೇವರಾಜ ರಾಜೋಳ, ರಾಹುಲ್ ಜಾಧವ, ಯುವರಾಜ ರಾಠೋಡ, ಬಾಬು ಪವಾರ, ಬೃಂದಾ, ಅನಿತಾ, ಪ್ರೀತಿ, ಕಾವೇರಿ, ಪ್ರಿಯಾ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






