Kalaburagi | ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿ ಪ್ರತಿಭಟನೆ : ಕಿಡಿಗೇಡಿಗಳ ವಿರುದ್ಧ ಆಕ್ರೋಶ

ಕಲಬುರಗಿ: ಕಮಲಾಪುರ ತಾಲೂಕಿನ ಚೇಂಗಟಾ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿ ಅವಮಾನಿಸಿರುವ ಘಟನೆ ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದವು.
ಪ್ರತಿಭಟನಾಕಾರರ ಮಾಹಿತಿ ಪ್ರಕಾರ, ಸೆ.8ರಂದು ರಾತ್ರಿ ಸುಮಾರು 10.30ರವರೆಗೆ ಭಾವಚಿತ್ರ ಸ್ಥಳದಲ್ಲೇ ಇತ್ತು. ಬಳಿಕ ಕಿಡಿಗೇಡಿಗಳು ಅದನ್ನು ಹರಿದು ಹಾಕಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಂಬೇಡ್ಕರ್ ಸೇವಾ ಸಮಿತಿಯ ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳ ಗಮನಕ್ಕೆ ಘಟನೆ ತಂದು, ಚೇಂಗಟಾ ಗ್ರಾಮದ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು.
ಪ್ರತಿಭಟನಾಕಾರರು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶದ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾನ್ ನಾಯಕರು. ಅವರ ಭಾವಚಿತ್ರಕ್ಕೆ ಅವಮಾನ ಮಾಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಗೌರವ ತೋರಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಕೃತ್ಯಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆ ಇರುವುದರಿಂದ ಘಟನೆಯ ಹಿಂದಿರುವ ಉದ್ದೇಶವನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಗೆ ಸ್ಪಂದಿಸಿದ ರಟಕಲ್ ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದರು. ಘಟನೆಯ ಹಿಂದೆ ಯಾವುದೇ ದುರುದ್ದೇಶ ಅಥವಾ ಇತರ ಕಾರಣಗಳಿವೆಯೇ ಎಂಬುದನ್ನು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಘಟನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಮುಖಂಡರು ಹಾಗೂ ಗ್ರಾಮಸ್ಥರು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಯುವ ಘಟಕದ ಅಧ್ಯಕ್ಷ ಎನ್.ಕೆ. ಅರ್ಜುನ್, ಭೀಮ ಆರ್ಮಿ ಕಾಳಗಿ ತಾಲೂಕು ಅಧ್ಯಕ್ಷ ಸಂದೀಪ್ ರಾವಣ ಸೇರಿದಂತೆ ಅಂಬೇಡ್ಕರ್ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಚೇಂಗಟಾ ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು.






