Kalaburagi | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ನಗರದ ವಾರ್ಡ್ ನಂ. 2ರ ಕೆ.ಕೆ. ನಗರದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸಿ, ಸಮರ್ಪಕವಾಗಿ ನೀರು ಪೂರೈಸುವಂತೆ ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಿವಾಸಿಗಳು ಮಂಗಳವಾರ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಕೊರತೆಯಿಂದ ನಿವಾಸಿಗಳು ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನೀರು ಸಂಗ್ರಹಿಸಲು ಹೆಚ್ಚಿನ ಸಮಯ ವ್ಯಯವಾಗುತ್ತಿರುವುದರಿಂದ ಮಕ್ಕಳು ಶಾಲೆಗೆ ತಡವಾಗಿ ತೆರಳುವಂತಾಗಿದೆ. ಅಲ್ಲದೆ, ಕೂಲಿ ಕಾರ್ಮಿಕರು ಹಾಗೂ ಮಹಿಳೆಯರು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಕುಡಿಯುವ ನೀರಿನ ಅಭಾವದಿಂದ ಇಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.
ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ 2026ರ ಸೆಪ್ಟೆಂಬರ್ 29ರಂದು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಮನವಿ ಸಲ್ಲಿಸಿ ಹಲವು ದಿನಗಳು ಕಳೆದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೆ.ಕೆ. ನಗರಕ್ಕೆ ಕೂಡಲೇ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಮಹಾನಗರ ಪಾಲಿಕೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಿರಂತರ ಧರಣಿ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕದ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ, ಅಧ್ಯಕ್ಷೆ ಗೌರಮ್ಮ ಮಾಕಾ, ಕಾರ್ಯದರ್ಶಿ ಸುನೀತಾ ಎಂ. ಕೊಲ್ಲೂರ ಸೇರಿದಂತೆ ಕೆ.ಕೆ. ನಗರದ ನಿವಾಸಿಗಳಾದ ಪಂಪಣ್ಣ, ಮಲ್ಲಣ್ಣ, ಬಸಲಿಂಗಯ್ಯ, ಶರಣಮ್ಮ, ಸಾನಮ್ಮ ಮತ್ತಿತರರು ಪಾಲ್ಗೊಂಡಿದ್ದರು.






