Kalaburagi | ಶೇ.100ರಷ್ಟು ಬೆಳೆ ನಷ್ಟ ಪರಿಹಾರ, ವಿಮೆ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಜಿಲ್ಲೆಯಲ್ಲಿ ಬರಗಾಲದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಶೇ.100ರಷ್ಟು ಬೆಳೆ ನಷ್ಟ ಪರಿಹಾರ ಹಾಗೂ ಬೆಳೆ ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್ಎಸ್) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಸಮೀಪದಲ್ಲಿರುವ ಇಂಡೋಸ್ ಇನ್ಶೂರೆನ್ಸ್ ವಿಮಾ ಕಂಪನಿಯ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ, ಕೃಷಿ ಜಂಟಿ ನಿರ್ದೇಶಕರು ಹಾಗೂ ವಿಮಾ ಕಂಪನಿಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ಸಮರ್ಪಕವಾಗಿ ಸುರಿಯದ ಪರಿಣಾಮ ರೈತರು ತೀವ್ರ ಬರಗಾಲದ ಸಂಕಷ್ಟ ಎದುರಿಸುತ್ತಿದ್ದಾರೆ. ತೊಗರಿ, ಹತ್ತಿ, ಹೆಸರು, ಉದ್ದು ಸೇರಿದಂತೆ ವಿವಿಧ ಬೆಳೆಗಳು ಮಳೆಯ ಅಭಾವದಿಂದ ಒಣಗಿದ್ದು, ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ. ಕೃಷಿ ಚಟುವಟಿಕೆಗಳಿಗಾಗಿ ಬ್ಯಾಂಕ್ಗಳು ಹಾಗೂ ಇತರ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿರುವ ರೈತರು, ಬೆಳೆ ನಷ್ಟದಿಂದಾಗಿ ಸಾಲ ಮರುಪಾವತಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಸರ್ಕಾರ ಬೆಳೆ ವಿಮೆ ಯೋಜನೆಯಡಿ ರೈತರಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದರೂ, ಅರ್ಹ ರೈತರಿಗೆ ಸಮರ್ಪಕವಾಗಿ ಪರಿಹಾರ ತಲುಪಿಲ್ಲ. ಬೆಳೆ ವಿಮೆ ಪರಿಹಾರ ನೀಡುವ ಸಂದರ್ಭದಲ್ಲಿ ಒಂದು ಅಥವಾ ಎರಡು ಬೆಳೆಗಳಿಗೆ ಮಾತ್ರ ಸೀಮಿತಗೊಳಿಸದೆ, ಬೆಳೆ ನಷ್ಟ ಅನುಭವಿಸಿರುವ ಎಲ್ಲ ರೈತರಿಗೂ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಬರಗಾಲ ಪೀಡಿತ ಪ್ರದೇಶಗಳ ರೈತರ ಬೆಳೆ ನಷ್ಟದ ಕುರಿತು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ, ಶೇ.100ರಷ್ಟು ಪರಿಹಾರ ನಿಗದಿಪಡಿಸಬೇಕು. ವಿಮಾ ಪರಿಹಾರದ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಬೇಕು. ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ಮುಂದಿನ ದಿನಗಳಲ್ಲಿ ಬೆಳೆ ಹಾನಿ ಸಂಭವಿಸಿದಾಗ ತಕ್ಷಣ ಪರಿಹಾರ ಒದಗಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ರಸ್ತೆಯಲ್ಲಿ ಹಾನಿಗೀಡಾದ ತೊಗರಿ ಬೆಳೆಯನ್ನು ಪ್ರದರ್ಶಿಸಿದ ಕಾರ್ಯಕರ್ತರು, ರೈತರ ಸಂಕಷ್ಟದ ಬಗ್ಗೆ ಗಮನ ಸೆಳೆದು ಆಕ್ರೋಶ ವ್ಯಕ್ತಪಡಿಸಿದರು.






