Kalaburagi | ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಮೇ 28ರಂದು ಪ್ರತಿಭಟನೆ : ಗುರುನಾಥ್ ಪೂಜಾರಿ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಗುರುನಾಥ್ ಪೂಜಾರಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯರನ್ನು ಹೇಗೆ ಸ್ಥಾನದಿಂದ ಇಳಿಸುತ್ತಾರೆ” ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರ ಬೆಂಬಲಾರ್ಥವಾಗಿ ಗುರುವಾರ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅಭಿಮಾನಿ ಬಳಗದ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು, ಕುರುಬ ಸಮುದಾಯದ ಮುಖಂಡರು, ಯುವಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅಹಿಂದ ನಾಯಕ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಬೇಕು ಎಂದು ಗುರುನಾಥ್ ಪೂಜಾರಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಾಗೇಂದ್ರಪ್ಪ ಪೂಜಾರಿ, ರವಿಗೊಂಡ ಬಿ. ಕಟ್ಟಿಮನಿ, ರಾಜ ನಾಗೂರ, ನಾಗೇಶ್ ಮುಚಖೇಡ್, ಷಣ್ಮುಖ ಶಿರಸಗಿ, ನಾಗು ಪೂಜಾರಿ, ಪ್ರವೀಣ್, ಸುನೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.






