Kalaburagi | ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ : ಡಿಸಿ ಇಕ್ರಮ್ ಶರೀಫ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಜಿಲ್ಲೆಯಾದ್ಯಂತ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳ ವಿತರಣೆ ಹಾಗೂ ಸಂಗ್ರಹಣೆ ಕಾರ್ಯ ನಡೆಸಲಿದ್ದಾರೆ. ಜಿಲ್ಲೆಯ ಎಲ್ಲಾ ಮತದಾರರು ಈ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿ ಪ್ರತಿ ನೋಂದಾಯಿತ ಮತದಾರರಿಗೆ ಪೂರ್ವಭರ್ತಿ ಮಾಡಿದ ಗಣತಿ ನಮೂನೆಗಳನ್ನು ವಿತರಿಸಲಿದ್ದಾರೆ. ಮತದಾರರು ನಮೂನೆಯಲ್ಲಿ ನಮೂದಿಸಿರುವ ವಿವರಗಳನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿ, ಸಹಿ ಹಾಕಿ ಸಂಬಂಧಿಸಿದ ಬಿಎಲ್‌ಒಗಳಿಗೆ ಹಿಂತಿರುಗಿಸಬೇಕು ಎಂದು ತಿಳಿಸಿದ್ದಾರೆ.
ಮತದಾರರು ಮನೆಯಲ್ಲಿ ಲಭ್ಯವಿಲ್ಲದಿದ್ದಲ್ಲಿ, ಮತಗಟ್ಟೆ ಮಟ್ಟದ ಅಧಿಕಾರಿಗಳು ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಆದ್ದರಿಂದ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಬಿಎಲ್‌ಒಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಅಗತ್ಯ ಮಾಹಿತಿಯನ್ನು ಒದಗಿಸುವುದರ ಜೊತೆಗೆ, ಮತದಾರರ ಹೆಸರು, ವಿಳಾಸ, ಛಾಯಾಚಿತ್ರ ಸೇರಿದಂತೆ ಅಗತ್ಯ ವಿವರಗಳನ್ನು ಗಣತಿ ನಮೂನೆಯಲ್ಲಿ ಸಮರ್ಪಕವಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ನಿಖರ, ಪಾರದರ್ಶಕ ಹಾಗೂ ಸಮಗ್ರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಈ ಪರಿಷ್ಕರಣೆ ಕಾರ್ಯದ ಉದ್ದೇಶವಾಗಿದ್ದು, ಜಿಲ್ಲೆಯ ಎಲ್ಲಾ ಮತದಾರರು ಈ ಮಹತ್ವದ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಕೋರಿದ್ದಾರೆ.






