Kalaburagi | ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಸಾಂದರ್ಭಿಕ ಚಿತ್ರ
ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೊ ನ್ಯಾಯಾಲಯ (ಎಫ್ಟಿಎಸ್ಸಿ–1) ತೀರ್ಪು ನೀಡಿದೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ವಸೀಮ ಶೇಖ್ ಎಂಬಾತನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಉಭಯ ಪಕ್ಷಗಳ ವಾದ ಆಲಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ತೀರ್ಪು ಪ್ರಕಟಿಸಿದರು.
ಪ್ರಕರಣದ ವಿವರಗಳ ಪ್ರಕಾರ, ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಅಪ್ರಾಪ್ತ ಬಾಲಕಿ ಪಿಯುಸಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿಯ ಪರಿಚಯವಾಗಿತ್ತು. ಆಟೋ ಚಾಲಕನಾಗಿದ್ದ ಆರೋಪಿ, ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡು ಆಕೆಯ ಮೊಬೈಲ್ ಸಂಖ್ಯೆ ಪಡೆದು ಸಂಪರ್ಕದಲ್ಲಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.
ಬಾಲಕಿ ಕಾಲೇಜಿಗೆ ತೆರಳುವ ಹಾಗೂ ವಾಪಸ್ ಬರುವ ವೇಳೆ ಆಟೋದಲ್ಲಿ ಸಂಚರಿಸುತ್ತಿದ್ದ ಸಂದರ್ಭವನ್ನು ಬಳಸಿಕೊಂಡು, ಬಳಿಕ ಕಲಬುರಗಿಯ ರಹಮತ್ ನಗರದಲ್ಲಿರುವ ತನ್ನ ಮನೆಗೆ ಕರೆದೊಯ್ದು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿತ್ತು.
ಅದೇ ರೀತಿ 2025ರ ಮಾರ್ಚ್ 15ರಂದು ಬಾಲಕಿಯನ್ನು ಮತ್ತೆ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪವೂ ಪ್ರಕರಣದಲ್ಲಿತ್ತು. ನಂತರ ಬಾಲಕಿಗೆ ಮಾತ್ರೆ ತಂದುಕೊಟ್ಟಿದ್ದು, ಆಕೆ ತನ್ನ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವೂ ದಾಖಲಾಗಿತ್ತು.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಸುಶೀಲಕುಮಾರ್, ಪೊಲೀಸ್ ಇನ್ಸ್ಪೆಕ್ಟರ್, ಪ್ರಕರಣದ ತನಿಖೆ ನಡೆಸಿದ್ದು, ಸಬ್ ಅರ್ಬನ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಡಿ.ಜಿ. ರಾಜಣ್ಣ ಅವರು ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯಲ್ಲಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ, ಪೋಕ್ಸೊ ಕಾಯ್ದೆಯ ಕಲಂ 6ರ ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35 ಸಾವಿರ ರೂ. ದಂಡ ವಿಧಿಸಿದೆ.
ಇದಲ್ಲದೆ, ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.






