ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ ಕಲಬುರಗಿಯ ವಿಶೇಷ ಪೊಕ್ಸೊ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 55 ಸಾವಿರ ದಂಡ ವಿಧಿಸಿದೆ.
ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಮಾಲಸಂಗ ಎಪಿಎಂಸಿ ಯಾರ್ಡ್ ನಿವಾಸಿ ರಝಾಕ್ ಸಾಬಶೇಖ(20)ಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
16 ವರ್ಷದ ಬಾಲಕಿಯನ್ನು ವಿವಾಹವಾಗುವುದಾಗಿ ನಂಬಿಸಿದ್ದ ರಝಾಕ್ ಸಾಬಶೇಖ ರಾಮನಗರದಲ್ಲಿರುವ ರೇಷ್ಮೆ ಕಾರ್ಖಾನೆಯೊಂದಕ್ಕೆ ಕರೆದೊಯ್ದು ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು.
ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ತನಿಖಾಧಿಕಾರಿಯಾಗಿದ್ದ ಸಹಾಯಕ ಪೊಲೀಸ್ ಆಯುಕ್ತ ಡಿ.ಜಿ. ರಾಜಣ್ಣ ಅವರು ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ, ಪೊಕ್ಸೊ ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂಗಳಡಿ ಆರೋಪಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿಯ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು 55 ಸಾವಿರ ರೂ. ದಂಡ ವಿಧಿಸಿದ್ದಾರೆ.
ಇದೇ ವೇಳೆ, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ 5 ಲಕ್ಷ ರೂ. ಪರಿಹಾರಧನವನ್ನು ತೀರ್ಪಿನ ದಿನಾಂಕದಿಂದ ಒಂದು ತಿಂಗಳೊಳಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದರು.






